Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಜನವರಿಯಿಂದ ಚುನಾವಣಾ ಪ್ರಚಾರ: ಎಚ್‌ಡಿಡಿ

ಜಾ.ದಳ ಅಭ್ಯರ್ಥಿಗಳ ಮೊದಲ ಪಟ್ಟಿ ಶಾಶ್ವತ ಅಲ್ಲ; ಬದಲಾವಣೆ ಆಗಲಿದೆ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಮುಂದಿನ ತಿಂಗಳಿನಿಂದ ನಾನು ಕೂಡ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಜಾ.ದಳದ ವರಿಷ್ಠ ಹಾಗೂ ಮಾಜಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ನಂಜನಗೂಡಿಗೆ ತೆರಳುವ ಮುನ್ನ ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ನಮ್ಮ ಪಕ್ಷದ ನಾಯಕರೆಲ್ಲರೂ ‘ಪಂಚರತ್ನ’ ಯಾತ್ರೆ ಮಾಡುತ್ತಿದ್ದಾರೆ. ಯಾತ್ರೆಗೆ ಜನರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

‘ಪಂಚರತ್ನ’ ಯಾತ್ರೆ ಸಾಗುತ್ತಿರುವ ಪ್ರತಿ ಹಳ್ಳಿಗಳಲ್ಲೂ ನಮ್ಮ ಪಕ್ಷದ ಶಾಸಕರು, ಮುಖಂಡರು, ಮಾಜಿ ಶಾಸಕರು ಒಂದೊಂದು ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಮನೆ ಮನೆ ತೆರಳಿ ಪಕ್ಷದ ಪರವಾಗಿ ಕೆಲಸ ಮಾಡಲು ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇನೆ ಎಂದರು.

ಜಾ.ದಳ ಅಭ್ಯರ್ಥಿಗಳ ಮೊದಲ ಪಟ್ಟಿ ಶಾಶ್ವತ ಅಲ್ಲ. ಪ್ರತಿ ದಿನ ಪಟ್ಟಿ ಬದಲಾವಣೆ ಆಗುತ್ತದೆ. ಪ್ರತಿ ದಿನ ಸಮೀಕ್ಷೆಯೂ ನಡೆಯುತ್ತಿದೆ. ಅದನ್ನು ಆಧರಿಸಿ ನಿರ್ಧಾರ ಆಗುತ್ತದೆ. ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಶಿವಲಿಂಗೇಗೌಡರು ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದ್ವಂದ್ವ ಇದೆ ಇನ್ನೂ ಸಮಸ್ಯೆ ಬಗೆಹರಿದಿಲ್ಲ ಎಂದು ಪ್ರತಿಕ್ರಿಯಿಸಿದರು.

ಹಾಸನ ಟಿಕೆಟ್‌ಗೆ ಪಕ್ಷದಲ್ಲಿ ಬಹಳ ಮಂದಿ ಆಕಾಂಕ್ಷಿಗಳಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಹಾಗೂ ಎಚ್.ಡಿ.ರೇವಣ್ಣ ಚರ್ಚಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಾರೆ. ಮುಂದೆ ಯಾರು ಮುಖ್ಯಮಂತ್ರಿ ಆಗಬೇಕು ಎಂಬುದನ್ನು ಜನರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

ಹಾಸನದಲ್ಲಿ ಶಾಸಕ ಪ್ರೀತಂ ಗೌಡನಿಗೆ ಬಿ.ಎಸ್.ಯಡಿಯೂರಪ್ಪ ಸರ್ಕಾರವಿದ್ದಾಗ ಸರ್ವ ಶಕ್ತಿ ಕೊಟ್ಟಿದೆ. ಯಾವ್ಯಾವ ಕೆಲಸ ಕೊಟ್ಟಿದ್ದಾರೆ? ಅದರಿಂದ ಎಷ್ಟು ಹಣ ಸಂಪಾದಿಸಿದ್ದಾರೆ? ಅವರ ಶಕ್ತಿಗೆ ಯಡಿಯೂರಪ್ಪ ಹಾಗೂ ಅವರ ಮಕ್ಕಳೇ ಕಾರಣ. ಯಾರ ಹೆದರಿಕೆಗೂ ನಾವು ಬಗ್ಗುವುದಿಲ್ಲ ಎಂದು ಗುಡುಗಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ