Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

ಮಹಿಳಾ ಸ್ವಸಹಾಯ ಸಂಘದ ಪದಾಧಿಕಾರಿಗಳಿಗೆ ಚಾಲನಾ ತರಬೇತಿ

ಹನೂರು: ಜಿಲ್ಲೆಯಲ್ಲಿಯೇ ಹನೂರು ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಮಹಿಳಾ ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಘನ ತ್ಯಾಜ್ಯ ವಿಲೇವಾರಿ ಕಾರ್ಯದಲ್ಲಿ ಕಾರ್ಯನಿರ್ವಹಿಸಲು ವಾಹನ ಚಾಲನೆ ತರಬೇತಿ ಪಡೆಯಲು ಮುಂದೆ ಬಂದಿರುವುದು ಶ್ಲಾಘನೆ ವಿಚಾರ ಎಂದು ಜಿಪಂ ಸಿಇಒ ಕೆ.ಎಂ. ಗಾಯತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್ ಚಾಮರಾಜನಗರ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ(ಎನ್.ಆರ್.ಎಲ್.ಎಂ.) ಮತ್ತು ಸ್ವಚ್ಛ ಭಾರತ್ ಮಿಷನ್ (ಗ್ರಾ) ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ವಾಹನ ಚಾಲನೆ ತರಬೇತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ವಚ್ಛ ಭಾರತ್ ಮಿಷನ್ ಯೋಜನೆ ಗುರಿ ಉದ್ದೇಶಗಳು ಸಾಕಾರಗೊಳ್ಳುವುದರ ಜೊತೆಗೆ ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಈ ಕಾರ್ಯಕ್ರಮ ಪೂರಕವಾಗಿದೆ. ಈಗಾಗಲೇ ಜಿಲ್ಲೆಯ 55 ಗ್ರಾಮ ಪಂಚಾಯಿತಿಗಳಲ್ಲಿ ತರಬೇತಿ ನೀಡಲಾಗಿದೆ. 90 ಗ್ರಾಮ ಪಂಚಾಯಿತಿಗಳಿಗೆ ತರಬೇತಿ ನೀಡಲಾಗುತ್ತಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಗೆ ಸಂಬಂಧಿಸಿದಂತೆ ಪ್ರಾಯೋಗಿಕವಾಗಿ ಮಾಹಿತಿ ನೀಡಲಾಗುವುದರಿಂದ ತರಬೇತಿ ಪಡೆದವರು ಸಾರ್ವಜನಿಕರಿಗೂ ಅರಿವು ಮೂಡಲು ಸಹಕಾರಿಯಾಗಿದೆ ಎಂದರು.

ಒಟ್ಟಾರೆ ಸರ್ಕಾರದ ಯೋಜನೆಗಳು ಕಾರ್ಯರೂಪಕ್ಕೆ ಬರಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಅಭಿಪ್ರಾಯ ಪಟ್ಟ ಅವರು ಮುಖ್ಯಮಂತ್ರಿ ಅವರು ಜಿಲ್ಲೆಗೆ ಆಗಮಿಸುವ ಸಂದರ್ಭದಲ್ಲಿ ಈ ಕಾರ್ಯಕ್ರಮದ ಯೋಜನೆಯ ಅನುಷ್ಠಾನದ ಬಗ್ಗೆ ಮಾಹಿತಿ ನೀಡಲಾಗುವುದು. ಈ ವೇಳೆ ತರಬೇತಿ ಪಡೆಯುವ ಸದಸ್ಯರುಗಳು ಜಿಲ್ಲಾ ಕೇಂದ್ರಕ್ಕೆ ಆಗಮಿಸಿ. ಹನೂರು ತಾಲೂಕಿನ ಸ್ವಸಹಾಯ ಸಂಘಗಳ ಸದಸ್ಯರುಗಳು ವಾಹನ ಚಾಲನೆ ತರಬೇತಿ ಪಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಜಿಲ್ಲೆ ಮತ್ತು ರಾಜ್ಯಕ್ಕೆ ಮಾದರಿಯಾಗಿ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ತಾಲೂಕು ಕಾರ್ಯನಿರ್ವಾಹಣಧಿಕಾರಿ ಶ್ರೀನಿವಾಸ್, ಎಡಿ ರವೀಂದ್ರ, ಕೆ ಎಸ್ ಆರ್ ಟಿ ಸಿ ಚಾಲನಾ ವಿಭಾಗದ ಮಂಜುನಾಥ್, ಎನ್ ಆರ್ ಎಲ್ ಎಂ ಸಂಯೋಜಕಿ ಸ್ಟೇಲ್ಲಾ ಕುಮಾರಿ, ವಿವಿಧ ಸ್ವಸಹಾಯ ಸಂಘಗಳ ಪದಾಧಿಕಾರಿಗಳು, ತಾಲೂಕು ಪಂಚಾಯತಿ ಸಿಬ್ಬಂದಿಗಳಾದ ರಾಜೇಶ್, ಮಹೇಶ್, ರಾಜು, ಮಹಿಳಾ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!