ಮಡಿಕೇರಿ: ಕಾಡಾನೆಯೊಂದು ಆಟೋವೊಂದರ ಮೇಲೆ ದಾಳಿ ಮಾಡಿದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮದ ಕಲ್ಲಳ್ಳ ಗ್ರಾಮದಲ್ಲಿ ನಡೆದಿದೆ.
ಆಟೋ ಚಾಲಕ ಕಿರಣ್ ಎಂಬವರು ಗಂಭೀರವಾಗಿ ಗಾಯಗೊಂಡವರು. ಸೋಮವಾರ ಬೆಳಗ್ಗೆ ಕಲ್ಲಳ್ಳ ಗ್ರಾಮದಲ್ಲಿ ಕಿರಣ್ ಆಟೋದಲ್ಲಿ ತೆರಳುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಘಟನೆಯಿಂದ ಕಿರಣ್ ಗಂಭೀರವಾಗಿ ಗಾಯಗೊಂಡಿದ್ದಾರೆ, ಆಟೋ ಜಖಂಗೊಂಡಿದೆ. ಗೋಣಿಕೊಪ್ಪಲು ಆಸ್ಪತ್ರೆಯಲ್ಲಿ ಗಾಯಾಳು ಕಿರಣ್‌ಗೆ ಚಿಕಿತ್ಸೆ ನೀಡಲಾಗಿದೆ.
ಬೆಳ್ಳಂಬೆಳಗ್ಗೆ ಆಟೋ ಮೇಲೆ ಕಾಡಾನೆ ದಾಳಿ ನಡೆಸಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಕೂಡಲೇ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸ್ಥಳಕ್ಕೆ ತಿತಿಮತಿ ಆರ್.ಎಫ್.ಓ ಅಶೋಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.