ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಭತ್ತ ನಾಟಿ ವೇಳೆ ಭಾರೀ ದುರಂತ ಸಂಭವಿಸಿದೆ.
ಭತ್ತ ನಾಟಿ ಮಾಡುವ ವೇಳೆ ಸಿಡಿಲು ಬಡಿದು 17 ಮಂದಿ ಕೂಲಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಕಲೇಶಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಕೋರ್ಲಗದ್ದೆ ಗ್ರಾಮದ ಚಂದ್ರು ಎಂಬುವವರಿಗೆ ಸೇರಿದ ಗದ್ದೆಯಲ್ಲಿ 25ಕ್ಕೂ ಹೆಚ್ಚು ಮಂದಿ ನಾಟಿ ಕಾರ್ಯ ಕೈಗೊಂಡಿದ್ದರು.
ನಾಟಿ ಕಾರ್ಯ ಮಾಡುವ ವೇಳೆಯೇ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಈ ವೇಳೆ ಸಿಡಿಲು ಬಡಿದು 17 ಮಂದಿ ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ.
ಇದರಲ್ಲಿ ಲತಾ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸರಿಯಾದ ಚಿಕಿತ್ಸೆ ನೀಡುವಂತೆ ನುರಿತ ವೈದ್ಯರಿಗೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.