ಹಾಸನ: ಹಾಸನ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಹಲವೆಡೆ ರಸ್ತೆ ಹಾಗೂ ಮನೆಗಳ ಗೋಡೆ ಕುಸಿದಿವೆ.
ಹಾಸನದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನೂ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಬಳಿ ರಸ್ತೆ ಕುಸಿದಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ರಸ್ತೆ ಕುಸಿತದಿಂದ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆಯ ಪಕ್ಕಕ್ಕೆ ಜಾರಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಇದಾಗಿದ್ದು, ಅವೈಜ್ಞಾನಿಕ ಕಾಮಗಾರಿಯಿಂದ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಕಬ್ಬಿನಗದ್ದೆ ಗ್ರಾಮದ ಕಮಲ ಎಂಬುವವರ ಮನೆ ಗೋಡೆ ಕುಸಿದಿದ್ದು, ಮನೆಯಲ್ಲಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದ್ದೊಂದು ಮನೆ ಕಳೆದುಕೊಂಡು ಕಮಲ ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇನ್ನೂ ಭಾರೀ ಮಳೆಯಿಂದ ಹೇಮಾವತಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹೇಮಾವತಿ ನದಿಯ ಉಪನದಿ ಯಗಚಿ ನದಿಯು ತುಂಬಿ ಹರಿಯುತ್ತಿದೆ. ಹಾಸನದಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರಿಯಲಿದ್ದು, ಗುಡ್ಡ ಪ್ರದೇಶಗಳಲ್ಲಿ ವಾಸಿಸುವ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





