ಹಾಸನ: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಪರಿಣಾಮ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತೀವ್ರ ಕಂಗಾಲಾಗಿದ್ದಾರೆ.
ರಾಜ್ಯದ ಹಲವೆಡೆ ಮಳೆ ಮುಂದುವರಿದಿದ್ದು, ಭಾರೀ ಮಳೆಯಿಂದ ಹೇಮಾವತಿ ನದಿ ತೀರದ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅರಕಲಗೂಡು ಹಾಗೂ ಹೊಳೆನರಸೀಪುರದಲ್ಲಿ ಭಾರೀ ಮಳೆಯಿಂದ ರಸ್ತೆಯ ಮಧ್ಯೆಯೇ ನೀರು ಹರಿಯುತ್ತಿದ್ದು, ಹೇಮಾವತಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಪರಿಣಾಮ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡಲಾಗಿದ್ದು, ಹೇಮಾವತಿ ನದಿ ತನ್ನ ಎಲ್ಲೆ ಮೀರಿ ಹರಿಯುತ್ತಿದೆ.
ಮೈದುಂಬಿ ಹರಿಯುತ್ತಿರುವ ನದಿಯಿಂದ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ವಾಹನ ಸಂಚಾರಕ್ಕೆ ಅಸ್ತವ್ಯಸ್ತ ಉಂಟಾಗಿದೆ.
ಹೇಮಾವದಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ತಗ್ಗು ಪ್ರದೇಶಗಳು ಕೂಡ ಜಲಾವೃತವಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇನ್ನು ಜಲಾವೃತವಾದ ಕೆಲ ಬಡಾವಣೆಗಳಿಗೆ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳೆನರಸೀಪುರದಲ್ಲಿ ನದಿ ಆರ್ಭಟಕ್ಕೆ 29 ಮನೆಗಳು ಜಲಾವೃತವಾಗಿದ್ದು, ಮನೆಯ ಸದಸ್ಯರನ್ನು ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.
ನದಿ ಪಾತ್ರದ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಯಾವುದೇ ಕಾರಣಕ್ಕೂ ನದಿ ಬಳಿ ತೆರಳದಂತೆ ಸೂಚನೆ ನೀಡಲಾಗಿದ್ದು, ಅಗತ್ಯವಿದ್ದರೆ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವಂತೆ ಸೂಚನೆ ನೀಡಲಾಗಿದೆ.