ಚಿಕ್ಕಮಗಳೂರು : ಭಾರೀ ಮಳೆಯಿಂದಾಗಿ ಶೃಂಗೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ಗುಡ್ಡ ಕುಸಿದಿದೆ. ರಸ್ತೆಗೆ ಅಡ್ಡಲಾಗಿ ಮಣ್ಣು ಬಿದ್ದ ಪರಿಣಾಮ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಪಶ್ಚಿಮ ಘಟ್ಟಗಳ ದಟ್ಟ ಸಾಲಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಅಪಾಯದ ಮಟ್ಟ ಮೀರಿ ತುಂಗಾ, ಭದ್ರೆ ನದಿಗಳು ಭೋರ್ಗರೆಯುತ್ತಿದೆ. ಇತ್ತ ಶೃಂಗೇರಿಯಲ್ಲಿ ನೆರೆ ಆತಂಕ ಸೃಷ್ಟಿಯಾಗಿದ್ದು, ಈ ನಡುವೆ ಗುಡ್ಡ ಕುಸಿತಗಳು ಜನರನ್ನು ಭಯಭೀತರನ್ನಾಗಿಸುತ್ತಿವೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿರುವದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಲಾಗಿದೆ. ಶೃಂಗೇರಿ ಭಾಗದ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆಯಾಗಿದ್ದು ತುಂಗಾ ನದಿ ನೀರಿನ ಪ್ರಮಾಣ ಏರಿಕೆಯಾಗಿದೆ. ಶೃಂಗೇರಿ ಶಾರದಾ ಮಠಕ್ಕೆ ಸಂಪರ್ಕಿಸುವ ಪರ್ಯಾಯ ಮಾರ್ಗ ಜಲಾವೃತವಾಗಿದ್ದು, ಮಠದ ಪಾರ್ಕಿಂಗ್ ಪ್ರದೇಶವಾದ ಗಾಂಧಿ ಮೈದಾನದಲ್ಲಿ ತುಂಗಾ ನದಿ ನೀರು ನುಗ್ಗುವ ಆತಂಕ ಸೃಷ್ಟಿಯಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಶೃಂಗೇರಿ ದೇವಾಲಯ ಸಮೀಪದ ತುಂಗಾ ನದಿಯ ತೀರದಲ್ಲಿರುವ ಕಪ್ಪೆ ಶಂಕರ ದೇವಾಲಯ ಸಂಪೂರ್ಣ ಮುಳುಗಡೆಯಾಗಿದೆ. ಮಳೆ ಹೀಗೆ ಮುಂದುವರೆದರೇ ಶೃಂಗೇರಿ ಶಾರದಾ ಮಠದ ಸುತ್ತಮುತ್ತಲಿನ ಇನ್ನಷ್ಟು ಪ್ರದೇಶ ಜಲಾವೃತವಾಗುವ ಆತಂಕ ಸೃಷ್ಟಿಯಾಗಿದೆ.
ಬಿರುಗಾಳಿ ಸಹಿತ ಮಳೆಯ ಆರ್ಭಟಕ್ಕೆ ಚಿಕ್ಕಮಗಳೂರು ತಾಲೂಕಿನ ವಿವಿಧ ಕಡೆ ಮನೆಗಳು ಸಹ ಕುಸಿದಿವೆ ಎಂಬ ಮಾಹಿತಿ ಲಭ್ಯವಾಗಿದೆ.





