ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಮತ್ತು ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
ಹಾಸನದ ಎಇಇ ಎಂ.ಸಿ.ಸತ್ಯನಾರಾಯಣ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಲೋಕಾಯುಕ್ತ ದಾಳಿ ವೇಳೆ ಎಇಇ ಸತ್ಯನಾರಾಯಣ ಅವರು, ಮೊಂಡಾಟ ಪ್ರದರ್ಶಿಸಿದ್ದಾರೆ. ಅಧಿಕಾರಿಗಳು ಮನೆ ಬಾಗಿಲು ತಟ್ಟಿದರೂ, ಒಳಗಿದ್ದವರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಾಗಿಲು ತೆರೆಯದೇ ಮೊಂಡಾಟ ಪ್ರದರ್ಶನ ಮಾಡಿದ್ದಾರೆ. ಬಳಿಕ ಬಾಗಿಲು ತೆರೆದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.




