ಹಾಸನ: ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಜನವರಿ.9 ರಂದು ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭಾಗವಹಿಸಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಭಾಷಣ ಸಮಾಜಕ್ಕೆ ಪ್ರಚೋದನಕಾರಿ ಎಂಬ ಆರೋಪದ ಮೇಲೆ ಪ್ರಮೋದ್ ಸೇರಿದಂತೆ ಇನ್ನಿತರರ ವಿರುದ್ಧ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಮೋದ್ ಮುತಾಲಿಕ್ ಸೇರಿದಂತೆ ಇನ್ನಿತರ ವಿರುದ್ಧ ಸಕಲೇಶಪುರ ಠಾಣೆಗೆ ಎಂ.ಕೆ.ಶ್ರೀಧರ್ ಎಂಬುವವರು ದೂರು ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ದೂರಿನ ಅನ್ವಯ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪೊಲೀಸ್ ಠಾಣೆಯಲ್ಲಿ ಪ್ರಮೋದ್ ಅವರ ವಿರುದ್ಧ ಬಿಎನ್‌ಎಸ್ 2023 U/S-196(1) 353(2) 3(5) ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.





