ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು, ಕಾರಿನಲ್ಲಿದ್ದವರು ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ನಡೆದಿದೆ.
ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿದ್ದ ಫಾಲ್ಸ್‌ಗೆ ಕಾರು ಉರುಳಿ ಬಿದ್ದಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಪರಿಣಾಮ ಕಿರು ಜಲಪಾತಗಳು ತುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ಜಲಪಾತ ವೀಕ್ಷಣೆ ವೇಳೆ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.





