ಹುಣಸೂರು: ಕೃಷಿ ಕಾರ್ಯದಲ್ಲಿ ತೊಡಗಿದ್ದ ರೈತರೊಬ್ಬರು ಹಾವು ಕಚ್ಚಿದ ಪರಿಣಾಮ ಚಿಕಿತ್ಸೆಗೆಂದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿಯ ನಾಗನಹಳ್ಳಿಯ ರೈತ ಚೆಲುವಯ್ಯ (೪೮) ಮೃತಪಟ್ಟವರು. ಇವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ.
ಚೆಲುವಯ್ಯ ಎಂದಿನಂತೆ ಭಾನುವಾರ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಮಧ್ಯಾಹ್ನ ಸಮಯದಲ್ಲಿ ಹಾವು ಕಚ್ಚಿದೆ. ಹುಣಸೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರವನ್ನು ಶೀಘ್ರ ಕೊಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.