ಮೈಸೂರು: ಜಿಲ್ಲಾಮಟ್ಟದ ವಿಶ್ವ ಮಾನವ ದಿನಾಚರಣೆ ಹಾಗೂ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಆರ್ ಲೋಕನಾಥ್ ಅವರು ತಿಳಿಸಿದರು.
ಇಂದು ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ಕಲಾಮಂದಿರದಲ್ಲಿ ಡಿಸೆಂಬರ್ 29 ರಂದು ಬೆಳಿಗ್ಗೆ 11:30ಕ್ಕೆ ವಿಶ್ವಮಾನವ ದಿನಾಚರಣೆಯನ್ನು ಆಚರಿಸಲಾಗುವುದು.
2024 ರ ಜನವರಿ 1 ರಂದು ಬೆಳಗ್ಗೆ 11:30ಕ್ಕೆ, ಕರ್ನಾಟಕ ಕಲಾಮಂದಿರದ ಆವರಣದಲ್ಲಿರುವ ಕಿರುರಂಗ ಮಂದಿರದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲಾಡಳಿತದ ಶಿಷ್ಟಾಚಾರದಂತೆ ಕಾರ್ಯಕ್ರಮವನ್ನು ಆಯೋಜಿಸಲಿದ್ದು, ಜಯಂತಿ ಕಾರ್ಯಕ್ರಮ ನಡೆಯುವ ಸ್ಥಳದ ಸ್ವಚ್ಛತೆ, ತಳಿರು ತೋರಣ, ಕುಡಿಯುವ ನೀರಿನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ವ್ಯವಸ್ಥೆ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಸಮಿತಿಯವರು ಅಮರಶಿಲ್ಪಿ ಜಕಣಾಚಾರಿಯವರ ಹೆಸರಿನಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಸಾಧಕರಿಗೆ ನೀಡುವಂತೆ ಮನವಿ ಮಾಡಿದರು. ಈ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸೋಮಶೇಖರ್ ಜಿ.ಎಸ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಜೆ. ಗೋವಿಂದರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಮಡ್ಡೀಕೆರೆ ಗೋಪಾಲ್, ಕನ್ನಡ ಚಳುವಳಿ ನಾಯಕರಾದ ತಾಯೂರು ವಿಠಲ ಮೂರ್ತಿ, ಮೋಹನ್ ಕುಮಾರ್ ಗೌಡ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು.