ಮೈಸೂರು: ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಇಂದು ರೈತ ವಿರೋಧಿ ಕಾಯಿದೆಗಳನ್ನು ರದ್ದು ಮಾಡಬೇಕೆಂದು ಹಾಗೂ ಹೂಡಿಕೆದಾರರ ಸಭೆ ನಡೆಸಬಾರದು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರೈತರ ನೆರವಿಗೆ ಧಾವಿಸದ ಸರ್ಕಾರ ನ.2ರಿಂದ ಮೂರು ದಿನಗಳ ಕಾಲ ಬೆಂಗಳೂರಿನ ಹೊರ ವಲಯದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಭೆ ನಡೆಸುತ್ತಿದೆ. ಇದು ರೈತ ಹಾಗೂ ಜನ ವಿರೋಧಿ ಸಭೆ ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರದ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಲು ರಾಜ್ಯ ಸರ್ಕಾರ ಒತ್ತಡ ಹೇರಬೇಕು, ಮಳೆಯಿಂದ ಮನೆ ಕಳೆದುಕೊಂಡವರಿಗೆ ವೈಜ್ಞಾನಿಕ ಪರಿಹಾರ ನೀಡಬೇಕು, ರೈತರ ಬಗರ್ ಹುಕುಂ ಹಾಗೂ ಅರಣ್ಯ ಭೂಮಿ ಸಾಗುವಳಿಯನ್ನು ಸಕ್ರಮಗೊಳಿಸಬೇಕು ಎಂದು ಆಗ್ರಹಿಸಿದರು. ಜಗದೀಶ್ ಸೂರ್ಯ, ಎಂ.ಸಿ.ಚಂದ್ರಶೇಖರ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.





