ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಧಾರಾಕಾರ ಮಳೆಯಿಂದ ಕೆಲವೆಡೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಜನರು ಕತ್ತಲಿನಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಭಾರೀ ಗಾಳಿ-ಮಳೆಯಿಂದ ಸುಂಟಿಕೊಪ್ಪ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ನಡುವಿನ ಗದ್ದೆಹಳ್ಳದಲ್ಲಿ ಇಂದು ಬೆಳಿಗ್ಗೆ ಮರ ಬಿದ್ದು ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಇನ್ನೂ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಗುಡ್ಡಗಾಡು ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





