ಮಡಿಕೇರಿ : ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಡಿಕೇರಿ ಸಮೀಪ ನಿರ್ಮಿಸಿದ್ದ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕುಸಿಯುವ ಭೀತಿ ಸೃಷ್ಟಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ತಡೆಗೋಡೆ ಕಳಭಾಗದ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ 2018ರಲ್ಲಿ ಸಂಭವಿಸಿದ ಜಲಸ್ಛೋಟ ಮತ್ತು ಭೂಕುಸಿತದಲ್ಲಿ ಹಲವು ಪ್ರದೇಶಗಳು ಅಪಾಯಕ್ಕೆ ಸಿಲುಕಿದ್ದವು. ಮಡಿಕೇರಿ ನಗರದ ಸಮೀಪ ಮಂಗಳೂರಿಗೆ ತೆರಳುವ ಹದ್ದಾರಿ ಕೂಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಪ್ರತಿ ವರ್ಷ ಭೂಕುಸಿತ ಉಂಟಾಗುವ ಅಪಾಯವಿದ್ದ ಕಾರಣ ಬೃಹತ್ ತಡೆಗೋಡೆಯನ್ನು ನಿರ್ಮಿಸಿತ್ತು. ಆದರೆ ಕಳೆದ ಒಂದು ತಿಂಗಳಿನಿಂದ ಮಡಿಕೇರಿ ತಾಲ್ಲೂಕಿನಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿರುವುದರಿಂದ ಮಂಗಳೂರು ರಸ್ತೆಯ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.
ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಸುರಕ್ಷತೆಯ ದೃಷ್ಟಿಯಿಂದ ತಡೆಗೋಡೆ ಕಳಭಾಗದ ನಿವಾಸಿಗಳನ್ನು ರೆಡ್ ಕ್ರಾಸ್ ಸಂಸ್ಥೆಯ ಭವನಕ್ಕೆ ಸ್ಥಳಾಂತರಿಸಿದ್ದಾರೆ. ರೆಡ್ ಕ್ರಾಸ್ ಭವನದಲ್ಲಿ ಆಶ್ರಯ ಪಡೆದಿರುವ ನಿವಾಸಿಗಳನ್ನು ಕಂದಾಯ ಇಲಾಖೆ ಹಾಗೂ ನಗರಸಭೆಯ ಅಧಿಕಾರಿಗಳು ಭೇಟಿ ಮಾಡಿ ಧೈರ್ಯ ತುಂಬಿದರು. ಊಟ, ಉಪಹಾರ ಸೇರಿದಂತೆ ಮೂಲಭೂತ ಸೌಲಭ್ಯವನ್ನು ಕಲ್ಪಿಸಲಾಗಿದೆ.
ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಬ್ಯಾರಿಕೇಡ್‌ಗಳನ್ನು ಅಳವಡಿಸುವ ಮೂಲಕ ವಾಹನಗಳ ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ. ಅಧಿಕ ತೂಕ ಸಾಮಾರ್ಥ್ಯದ ವಾಹನಗಳ ಸಂಚಾರವನ್ನು ಜಿಲ್ಲಾಡಳಿತ ಈಗಾಗಲೇ ನಿಷೇಧಿಸಿದೆ.





