ಕೊಡಗು: ವ್ಯಕ್ತಿಯೊಬ್ಬರ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ಇಂದು ಬೆಳಿಗ್ಗೆ ವಿರಾಜಪೇಟೆ ಹೊರವಲಯದ ಚೆಂಬೆ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ.
ಚಂಬಂಡ ಜನತ್ ಕುಮಾರ್ ಎಂಬುವವರು ಮನೆಯ ಕೊಟ್ಟಿಗೆ ಬಳಿ ತೆರಳಿದ್ದ ಸಂದರ್ಭದಲ್ಲಿ ಅವರ ಮೇಲೆ ಎರಗಿದ ಒಂಟಿ ಸಲಗ ಸೊಂಟದ ಭಾಗಕ್ಕೆ ತಿವಿದು ಗಂಭೀರವಾಗಿ ಗಾಯಗೊಳಿಸಿದೆ. ಗಂಭೀರ ಗಾಯಗೊಂಡಿರುವ ಅವರನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯಲ್ಲಿರುವ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಈ ಭಾಗದಲ್ಲಿ ಕಾಡಾನೆಗಳು ಪದೇ ಪದೇ ದಾಳಿ ನಡೆಸುತ್ತಿದ್ದು, ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಇನ್ನು ಮುಂದಾದರೂ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.