ಕೊಡಗು: ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಎಮ್ಮೆಮಾಡು ಗ್ರಾಮದ ಕೆ ಎಂ ಮೊಹಮ್ಮದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 35 ಕೆಜಿ 650 ಗ್ರಾಂ ಹಸಿ ಗಾಂಜಾ 42 ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ 13 ಕಾಂಡಗಳು ಮತ್ತು 275 ಗ್ರಾಂ ಒಣಗಿದ ಗಾಂಜಾವನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ನಿಷೇಧಿತ ಮಾದಕ ವಸ್ತುವನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪೊಲೀಸರು, ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಡೆಗಟ್ಟುವ ಸಲುವಾಗಿ ಹಾಗೂ ಕೊಡಗು ಜಿಲ್ಲೆಯನ್ನು ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ಮುಕ್ತ ಜಿಲ್ಲೆಯಾನ್ನಾಗಿಸಲು ಸಹಕರಿಸುವ ನಿಟ್ಟಿನಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಈ ಅಕ್ರಮ ಚಟುವಟಿಕೆ ಎಲ್ಲೇ ನಡೆದರೂ ನಮಗೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದಾರೆ.