ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ವಿಶೇಷ ಕಾಳಜಿ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ರೈತ ಮುಖಂಡ ಬಡಗಲಪುರ ನಾಗೇಂದ್ರ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ರಾಜ್ಯದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಗೋಳನ್ನು ಕೇಳುವವರು ಯಾರೂ ಇಲ್ಲದಂತಾಗಿದೆ. ಬೆಳೆಗಳು ಕೈತಲುಪುವ ವೇಳೆಗೆ ಭಾರೀ ಮಳೆಯಿಂದ ಹಾನಿಯಾಗಿದೆ. ಹೀಗಾಗಿ ಸರ್ಕಾರ ಎಚ್ಚೆತ್ತುಕೊಂಡು ತುರ್ತಾಗಿ ವಿಶೇಷ ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂಬಂಧ ಸಿಎಂ ಸಿದ್ದರಾಮಯ್ಯರಿಗೂ ಬಡಗಲಪುರ ನಾಗೇಂದ್ರ ಪತ್ರ ಬರೆದಿದ್ದು, ಕೊಡಗಿಗೆ ವಿಶೇಷ ಕಾಳಜಿ ವಹಿಸಿ ಜನರ ಸ್ಥಿತಿಯನ್ನು ಅವಲೋಕಿಸಿ, ಕೊಡಗಿನಲ್ಲಿ ಅಗತ್ಯ ಮುಂಜಾಗ್ರತೆ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಧಾರಾಕಾರ ಮಳೆಯಿಂದ ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕಾಫಿ ಬೆಳೆಗೆ ರೋಗ ಬಂದಿದ್ದು, ಈ ಬಗ್ಗೆ ಸರ್ಕಾರ ಕೂಡಲೇ ಸಮೀಕ್ಷೆ ನಡೆಸಬೇಕು. ಬಳಿಕ ಕೊಳೆರೋಗಕ್ಕೆ ತುತ್ತಾದ ಬೆಳೆಗೆ ಸೂಕ್ತ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.
ಎಲ್ಲಾ ಬೆಳೆಗಳಿಗೂ ಕೂಡ ರಾಜ್ಯ ಸರ್ಕಾರ ಪರಿಹಾರ ನೀಡಲೇಬೇಕು ಎಂದು ಆಗ್ರಹಿಸಿದರು.