ಕೊಡಗು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡ ಪರಿಣಾಮ ಹಾರಂಗಿ ಜಲಾಶಯ ಭರ್ತಿಯತ್ತ ಸಾಗಿದೆ.
ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಮಡಿಕೇರಿ ನಗರದಲ್ಲಂತೂ ಸೋಮವಾರ ರಾತ್ರಿಯಿಂದ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು.
ಕೊಡಗಿನಲ್ಲಿ ಬಿರುಸಿನ ಮಳೆ ಸುರಿಯುತ್ತಿರುವ ಪರಿಣಾಮ ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದ್ದು, ಭರ್ತಿಯತ್ತ ಸಾಗಿದೆ. ಜಲಾಶಯದ ಒಳಹರಿವು 500 ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು ಕೂಡ 500 ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದೆ.
ಇನ್ನೂ ಕಳೆದ ೨೪ ಗಂಟೆಗಳಲ್ಲಿ ಮಡಿಕೇರಿ ತಾಲ್ಲೂಕಿನ ಭಾಗಮಂಡಲದಲ್ಲಿ 4 ಸೆಂ.ಮೀ ನಷ್ಟು ಮಳೆ ಸುರಿದಿದೆ. ವಿರಾಜಪೇಟೆಯಲ್ಲಿ 5 ಸೆ.ಮೀ ಮಳೆಯಾಗಿದ್ದು, ಹಳ್ಳಕೊಳ್ಳಗಳೆಲ್ಲಾ ತುಂಬಿ ತುಳುಕಾಡುತ್ತಿವೆ. ಮಳೆಯ ಪ್ರಮಾಣ ಮತ್ತಷ್ಟು ಮುಂದುವರಿಯಲಿದ್ದು, ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿರುವ ಜನತೆ ಎಚ್ಚರಿಕೆಯಿಂದ ಇರುವಂತೆ ಕೊಡಗು ಜಿಲ್ಲಾಡಳಿತ ಮನವಿ ಮಾಡಿದೆ.
ಕೊಡಗಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ಬೇರೆಡೆಗೆ ಶಿಫ್ಟ್ ಮಾಡಿಸಿದೆ.