ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ಪ್ರವಾಹ ಪರಿಸ್ಥಿತಿ ಉಲ್ಬಣವಾಗಿದೆ.
ಕೊಡಗಿನಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ 8 ಗ್ರಾಮಗಳು ಪ್ರವಾಹದಿಂದ ಮುಳುಗಡೆಯಾಗಿವೆ. 90 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದ್ದು, 4 ಕಡೆ ಕಾಳಜಿ ಕೇಂದ್ರವನ್ನು ತೆರೆಯಲಾಗಿದೆ.
ನಿನ್ನೆ ಕೊಡಗು ಜಿಲ್ಲೆಯಲ್ಲಿ ದಾಖಲೆಯ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ವಾಹನ ಸವಾರರ ಕಷ್ಟ ಹೇಳತೀರದಾಗಿದ್ದು, ಜನರು ಮನೆಯಿಂದ ಹೊರಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಕೊಡಗು ಜಿಲ್ಲೆಯಲ್ಲಿ ಕ್ಷಣ ಕ್ಷಣಕ್ಕೂ ಮಳೆ, ಗಾಳಿ, ನದಿ ನೀರಿನ ಮಟ್ಟ, ಪ್ರವಾಹ ಭಾರೀ ಏರಿಕೆಯಾಗುತ್ತಿದ್ದು, ಜನರನ್ನು ತೀವ್ರ ಭಯಭೀತರನ್ನಾಗಿಸಿದೆ.
ಇನ್ನೂ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಅನೇಕ ಸೇತುವೆಗಳು ಸಂಪೂರ್ಣ ಮುಳುಗಡೆಯಾಗಿದ್ದು, ಅಗತ್ಯ ವಸ್ತುಗಳನ್ನು ತರಲು ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.





