Mysore
22
mist

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ: ವಿದ್ಯಾರ್ಥಿಗಳ ಪರದಾಟ

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಹುಬ್ಬ ಮಳೆಯ ಅಬ್ಬರ ಜೋರಾಗಿದ್ದು, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ.

ಮಡಿಕೇರಿ ನಗರದಲ್ಲಿ ಭಾನುವಾರ ತಡರಾತ್ರಿಯಿಂದಲೂ ಒಂದೇ ಸಮನೆ ಬಿರುಸಿನ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದ ವಿದ್ಯುತ್‌ ಸಂಪರ್ಕ ಕಡಿತವಾಗಿದ್ದು, ಜನತೆ ಕತ್ತಲಿನಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಶಾಲಾ-ಕಾಲೇಜುಗಳಿಗೆ ತೆರಳುವ ಮಕ್ಕಳು ಬಿರುಸಿನ ಮಳೆಯಿಂದ ಹೈರಾಣಾಗಿದ್ದಾರೆ. ಇನ್ನು ಎರಡು ದಿನ ವರುಣ ಹೀಗೇಯೇ ಮುಂದುವರಿಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಂಜೆ ಶಾಲೆ ಮುಗಿಯುವಾಗಲೂ ಮಳೆಯ ಆರ್ಭಟ ಮಾತ್ರ ನಿಲ್ಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮಳೆಯ ಜೊತೆಗೆ ಗಾಳಿಯು ಕೂಡ ರಭಸವಾಗಿ ಬೀಸುತ್ತಿದ್ದು, ಚಳಿಯ ವಾತಾವರಣ ನಿರ್ಮಾಣವಾಗಿದೆ. ಜೊತೆಗೆ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದಿಂದ 15 ಸಾವಿರಕ್ಕೂ ಹೆಚ್ಚಿನ ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದ್ದು, ನದಿಯ ಆರ್ಭಟ ಹೆಚ್ಚಾದರೆ ಜನತೆ ತಮ್ಮ ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.

ಮಳೆ ಇನ್ನು ಎರಡು ದಿನಗಳ ಕಾಲ ಮುಂದುವರಿಯಲಿದ್ದು, ಹಾರಂಗಿ ಜಲಾಶಯದಿಂದ ಯಾವುದೇ ಕ್ಷಣದಲ್ಲಾದರೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡಲಾಗುವುದು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

 

 

Tags:
error: Content is protected !!