ಕೊಡಗು: ಕೊಡಗಿನಲ್ಲಿ ಕಳೆದ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿದೆ.
ಇಂದು ಬೆಳಿಗ್ಗೆಯೂ ಸಹ ಕೊಡಗಿನಲ್ಲಿ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಹೊರಹರಿವನ್ನು ಸಹ ಏರಿಕೆ ಮಾಡಲಾಗಿದೆ.
ಇಂದು ಬೆಳಿಗ್ಗೆ 8 ಗಂಟೆ ವೇಳೆಗೆ 2362 ಕ್ಯೂಸೆಕ್ಸ್ ಇದ್ದ ಒಳಹರಿವು 11 ಗಂಟೆ ವೇಳೆಗೆ 7800 ಕ್ಯೂಸೆಕ್ಸ್‌ಗೆ ಏರಿಕೆಯಾಯಿತು. ಈ ಹಿನ್ನೆಲೆಯಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ನದಿಗೆ 11,800 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನದಿಗೆ ಇಳಿಯದಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.
ಕೊಡಗಿನಲ್ಲಿ ಮಳೆ ಮುಂದುವರಿದರೆ ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬರಲಿದ್ದು, ಹೊರಹರಿವನ್ನು ಸಹ ಏರಿಕೆ ಮಾಡಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.