Mysore
19
scattered clouds
Light
Dark

ಕೊಡಗಿನಲ್ಲಿ ಭಾರೀ ಮಳೆ: ಮುಂದಿನ 2 ದಿನಗಳ ಕಾಲ ರೆಡ್‌ ಅಲರ್ಟ್‌

ಕೊಡಗು: ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಕೊಡಗಿನಲ್ಲಿ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ  ಮುಂದಿನ ಎರಡು ದಿನಗಳ ಕಾಲ ಕೊಡಗಿನಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕಳೆದ ಎರಡು ದಿನಗಳಿಂದ ಕೊಡಗಿನಲ್ಲಿ ಮಳೆ ಕೊಂಚ ಬಿಡುವು ಕೊಟ್ಟಿತ್ತು. ಮಳೆ ನಿಂತಿದ್ದ ಪರಿಣಾಮ ಜನತೆ ಕೊಂಚ ನಿರಾಳರಾಗಿದ್ದರು. ಆದರೆ ಇಂದು ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಧಾರಾಕಾರ ಮಳೆಗೆ ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ.

ಧಾರಾಕಾರ ಮಳೆಯಿಂದ ಜಿಲ್ಲೆಯಾದ್ಯಂತ ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದು, ಜನತೆ ಕತ್ತಲಿನಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕೊಡಗು ಜಿಲ್ಲೆಯಲ್ಲಿ ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೊಡಗು ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ರೆಡ್‌ ಅಲರ್ಟ್‌ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಕೊಡಗಿನಾದ್ಯಂತ ಎರಡು ದಿನಗಳ ಕಾಲ ಶಾಲೆಗಳಿಗೂ ಕೂಡ ರಜೆ ನೀಡುವ ಸಾಧ್ಯತೆಯಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನೂ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.