ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿದ್ದು, ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಪರಿಣಾಮ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮಡಿಕೇರಿ ನಗರ, ನಾಪೋಕ್ಲು, ಸೋಮವಾರಪೇಟೆ, ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
ಧಾರಾಕಾರ ಮಳೆಯ ಜೊತೆಗೆ ರಭಸವಾಗಿ ಗಾಳಿ ಬೀಸುತ್ತಿದ್ದು, ಮರಗಳು ಕೂಡ ಧರೆಗುರುಳುತ್ತಿವೆ. ಗಾಳಿಗೆ ಹಲವಾರು ವಿದ್ಯುತ್ ಕಂಬಗಳು ಕೂಡ ನೆಲಕಚ್ಚಿವೆ. ಬೀಸುತ್ತಿರುವ ಶೀತಗಾಳಿ ಹಾಗೂ ಕವಿಯುತ್ತಿರುವ ದಟ್ಟ ಮಂಜಿನಿಂದ ಜನರು ಕಂಗಾಲಾಗಿದ್ದು, ಶೀತಮಯ ವಾತಾವರಣದಲ್ಲಿ ಬಸವಳಿದಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಮಳೆ ಇನ್ನೂ ಮೂರು ದಿನ ಮುಂದುವರಿಯಲಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಧಾರಾಕಾರ ಮಳೆಯಿಂದ ಮೈದುಂಬಿ ಹರಿಯುತ್ತಿರುವ ಕಾವೇರಿ ನದಿ ಬಳಿಗೆ ಯಾರೂ ಕೂಡ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.





