ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಕೊಡಗಿನಲ್ಲಿ ಧಾರಾಕಾರ ಮಳೆಯ ಜೊತೆಗೆ ಅತೀ ವೇಗದಲ್ಲಿ ಗಾಳಿಯೂ ಬೀಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳೆಲ್ಲಾ ಸಂಪೂರ್ಣ ಜಲಾವೃತವಾಗಿದ್ದು, ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಪರಿಣಾಮ ರಸ್ತೆಗಳಲ್ಲಿ ಸಂಚರಿಸಲು ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನೂ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಹಲವೆಡೆ ಗುಡ್ಡ ಹಾಗೂ ಮನೆಗಳು ಕೂಡ ಕುಸಿತವಾಗಿದ್ದು, ಜನರು ಭಯದಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ನಡುವೆ ಭಾಗಮಂಡಲ-ತಲಕಾವೇರಿ ನಡುವಿನ ಕೋಳಿಕಾಡು ಸಮೀಪದಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಉರುಳಿದ್ದು, ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಮರ ತೆರವು ಕಾರ್ಯಾಚರಣೆ ನಡೆಸುವುದಕ್ಕೂ ಮಳೆ ಅಡ್ಡಿ ಪಡಿಸುತ್ತಿದ್ದು, ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಮಳೆ ನಿಂತರಷ್ಟೇ ಧರೆಗುರುಳಿದ ಮರವನ್ನು ತೆರವು ಮಾಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.





