ಕೊಡಗು

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ

ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರ ಅಮೂಲ್ಯ ಜೀವ, ಬೆಳೆ ಹಾನಿ ತಪ್ಪಿಸಲು ಆಯ್ದ ಪ್ರದೇಶದಲ್ಲಿ, ಆಯ್ದ ವನ್ಯಜೀವಿಗಳ ಸಂತಾನ ನಿಯಂತ್ರಣದ ಸಲಹೆಗಳು ಬಂದಿದ್ದು, ಈ ಬಗ್ಗೆ ಸಾರ್ವಜನಿಕವಾಗಿ ತಜ್ಞರ ಮಟ್ಟದಲ್ಲಿ ಚರ್ಚೆ ಆಗುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ನೂತನ ತೂಗುಸೇತುವೆ ಮತ್ತು ಅಧಿಕಾರಿಗಳ ವಸತಿಗೃಹಕ್ಕೆ ಶಂಕುಸ್ಥಾಪನೆ ನೆರವೇರಿಸಿ, ನೂತನ ವಾಹನಗಳಿಗೆ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, ಆನೆ-ಮಾನವ ಸಂಘರ್ಷ ನಿಯಂತ್ರಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ಅವರು ವರದಿ ನೀಡಿದ್ದಾರೆ. ಕಾಡಿನಂಚಿನ ಜನರು ಕೂಡ ಈ ಬಗ್ಗೆ ಸಲಹೆ ನೀಡಬೇಕು ಎಂದರು.

ರೈಲ್ವೆ ಬ್ಯಾರಿಕೇಡ್, ಆನೆ ಕಂದಕ ನಿರ್ಮಾಣಕ್ಕೆ ಹಣಕಾಸಿನ ಕೊರತೆ ಇಲ್ಲ. ಅನುದಾನದ ಕೊರತೆ ಇಲ್ಲ. ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಆದಷ್ಟು ಶೀಘ್ರ ಹೆಚ್ಚಿನ ಬ್ಯಾರಿಕೇಡ್ ಅಳವಡಿಸಲಾಗುವುದು ಎಂದರು.

ಅರಣ್ಯವಾಸಿಗಳು ಮತ್ತು ಅರಣ್ಯದಂಚಿನ ಜನರು ದೀರ್ಘ ಕಾಲದಿಂದ ಅರಣ್ಯವನ್ನು ಸಂರಕ್ಷಿಸಿದ್ದಾರೆ. ಆದರೆ ಇಂದು ಮಾನವ-ವನ್ಯಜೀವಿ ಸಂಘರ್ಷದಿಂದ ಅಮೂಲ್ಯ ಜೀವಹಾನಿ ಆಗುತ್ತಿದ್ದು, ಅಧಿಕಾರಿ ಮತ್ತು ಸಿಬ್ಬಂದಿಗಳು ಜನರ ಜೀವ ಉಳಿಸಲು ಪ್ರಥಮ ಆದ್ಯತೆ ನೀಡಬೇಕು ಎಂದರು.

7.3 ಕೋಟಿ ವೆಚ್ಚದಲ್ಲಿ ತೂಗು ಸೇತುವೆ:
ಪ್ರವಾಸಿಗರ ಅನುಕೂಲಕ್ಕಾಗಿ ಮತ್ತು ದುಬಾರೆ ಹಾಡಿಯಲ್ಲಿರುವ 150 ಮನೆಗಳ ನಿವಾಸಿಗಳಿಗೆ ತುರ್ತು ಸಂದರ್ಭದಲ್ಲಿ ನಗರಕ್ಕೆ ಬರಲು ಅನುಕೂಲವಾಗುವಂತೆ 7 ಕೋಟಿ 30 ಲಕ್ಷ ರೂ. ವೆಚ್ಚದಲ್ಲಿ ಗುಣಮಟ್ಟದ ತೂಗು ಸೇತುವೆ ನಿರ್ಮಿಸಲಾಗುತ್ತಿದೆ. ಈ ಮೂಲಕ ದೀರ್ಘ ಕಾಲದ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ ಎಂದರು.

ಕೊಡಗು ಜಿಲ್ಲೆ ಜಗತ್ತಿನ ಜೀವವೈವಿಧ್ಯತೆಯ ತಾಣ ಹಾಗೂ ಹಲವು ನದಿಗಳ ಮೂಲವಾದ ಪಶ್ಚಿಮಘಟ್ಟವನ್ನು ಒಳಗೊಂಡ ಸುಂದರ ಪ್ರದೇಶ. ಇಲ್ಲಿ ನೂರಾರು ಪ್ರಭೇದದ ಸಸ್ಯಸಂಕುಲ, ಪ್ರಾಣಿ ಸಂಕುಲ, ಪಕ್ಷಿ ಸಂಕುಲ, ಕೀಟ ಸಂಕುಲ ಇದ್ದು, ನೀವೆಲ್ಲರೂ ಇಂತಹ ಸುಂದರ ಪರಿಸರದಲ್ಲಿದ್ದೀರಿ. ನಿಜಕ್ಕೂ ನೀವೆಲ್ಲ ಅದೃಷ್ಟವಂತರು ಎಂದರು.

ಇಂದು ನಾವು ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆಯ ಪರಿಣಾಮ ಎದುರಿಸುತ್ತಿದ್ದೇವೆ. ಬೆಂಗಳೂರು ನಿವೃತ್ತರ ಸ್ವರ್ಗವಾಗಿತ್ತು. ಆದರೆ ಇಂದು ತಾಪಮಾನ ಏರಿಕೆ ಆಗುತ್ತಿದೆ. ರಾಜ್ಯದಲ್ಲಿ ಬಿಸಿಲ ಝಳ ಹೆಚ್ಚಳವಾಗುತ್ತಿದೆ. ಇದೆಲ್ಲ ಕಾಡು ನಾಶದ ಪರಿಣಾಮವಾಗಿದೆ. ಹೀಗಾಗಿ ಅರಣ್ಯ, ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯವಾಗಿದೆ ಎಂದರು.

ಇಂದಿರಾಗಾಂಧೀ ಅವರು ಪ್ರಧಾನಮಂತ್ರಿಗಳಾಗಿ ವನ್ಯಜೀವಿ ಸಂರಕ್ಷಣಾ ಕಾಯಿದೆ, ಅರಣ್ಯ ಸಂರಕ್ಷಣಾ ಕಾಯಿದೆ ಜಾರಿಗೆ ತಂದ ಪರಿಣಾಮವಾಗಿ ಕಾಡು, ವನ್ಯಜೀವಿ ಉಳಿದಿದೆ. ಪರಿಸರ ಸಮತೋಲನ ಕಾಪಾಡುವಲ್ಲಿ ವನ್ಯಜೀವಿಗಳ ಪಾತ್ರ ಮಹತ್ವದ್ದಾಗಿದ್ದು, ಕಾಡಿನಂಚಿನ ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸಬೇಕು ಎಂದು ತಿಳಿಸಿದರು.

ಅರಣ್ಯ ಇಲಾಖೆ ಆನೆಗಳ ಚಲನವಲನದ ಬಗ್ಗೆ ನಿಗಾ ಇಡಲು ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಳ್ಳುತ್ತಿದೆ. ನವೆಂಬರ್, ಡಿಸೆಂಬರ್ ಜನವರಿಯಲ್ಲಿ ಆನೆಗಳು ಕಾಡಿನಿಂದ ಹೊರಬರುತ್ತವೆ. ಆಗ ಸಂಘರ್ಷ ಹೆಚ್ಚಾಗುತ್ತದೆ, ಕಾರಣ ಆನೆಗಳು ತೆನೆ ತಿನ್ನಲು ಬರುತ್ತವೆ. ತೋಟದ ಮಾಲಿಕರು ಜಮೀನು ಮಾಲೀಕರು ಕೂಡ ಆನೆಗಳ ವಿಚಾರದಲ್ಲಿ ಸೌಹಾರ್ದತೆಯಿಂದ ನಡೆದುಕೊಳ್ಳಬೇಕು ಎಂದರು.

ದುಬಾರೆ ಆನೆ ಶಿಬಿರಕ್ಕೆ 100 ವರ್ಷಗಳ ಇತಿಹಾಸವಿದೆ. ಇಲ್ಲಿ 15 ಕುಮ್ಕಿ ಆನೆಗಳಿದ್ದು, ದಸರಾ ಮಹೋತ್ಸವದಲ್ಲಿ ಭಾಗಿಯಾಗುತ್ತಿವೆ. ವಿವಿಧ ಕಾರ್ಯಚರಣೆಯಲ್ಲಿ ಭಾಗಿಯಾಗುತ್ತಿವೆ. ಆನೆಗಳಿಗೆ ಪೂಜ್ಯ ಸ್ಥಾನ ಇದೆ. ಹೀಗಾಗಿ ನಾವು ವನ್ಯಜೀವಿಗಳ ಸಂರಕ್ಷಣೆಗೂ ಮುಂದಾಗಬೇಕು ಎಂದರು.

ಕಾಡಿನಂಚಿನ ಜನರೊಂದಿಗೆ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ಕಾನೂನು ಪಾಲಿಸಿ, ಜನರಿಗೆ ಅರಿವು ಮೂಡಿಸಿ, ಆದರೆ ಹೆದರಿಸಬೇಡಿ ಎಂದು ಕಿವಿ ಮಾತು ಹೇಳಿದರು.

ಅರಣ್ಯದಂಚಿನ ಜನರಿಗೆ ಅನುಕೂಲವಾಗುವಂತೆ ಹಲವು ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಅವರ ಜೀವನೋಪಾಯಕ್ಕೆ ನೆರವಾಗುವಂತಹ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಶಾಲೆಗಳ ಅಭಿವೃದ್ಧಿಗೂ ಶ್ರಮಿಸುತ್ತಿದ್ದೇವೆ ಎಂದರು.

ಸೆಕ್ಷನ್ 4, ಡೀಮ್ಡ್ ಅರಣ್ಯ ಮೊದಲಾದ ವಿಚಾರಗಳ ಬಗ್ಗೆ ಶಾಸಕರು ಪ್ರಸ್ತಾಪಿಸಿದ್ದು, ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ ಅವರು, ಇಂದು ಯಸಳೂರಿನಲ್ಲಿ ಅರ್ಜುನ ಆನೆಯ ಸ್ಮಾರಕ ಉದ್ಘಾಟನೆಗೆ ತೆರಳುತ್ತಿರುವುದಾಗಿ ತಿಳಿಸಿದರು.

ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಅರಣ್ಯ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಯನ್ನು ಈಶ್ವರ ಖಂಡ್ರೆ ತಂದಿದ್ದಾರೆ. ಕೊಡಗಿನಲ್ಲಿ ಆನೆ-ಮಾನವ ಸಂಘರ್ಷ ಹೆಚ್ಚಾಗಿದ್ದು, ತೋಟದ ಆನೆಗಳನ್ನು ಸ್ಥಳಾಂತರಿಸಲು ಕ್ರಮ ವಹಿಸಬೇಕು, ಬೆಳೆ ಹಾನಿಗೆ ಶೀಘ್ರ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಜನಸಂಪರ್ಕ ಕಾರ್ಯಕ್ರಮದಡಿ ಫಲಾನುಭವಿಗಳಿಗೆ ಜೇನು ಪೆಟ್ಟಿಗೆ, ಕಾಡಿನಂಚಿನ ಗ್ರಾಮದ ಮಹಿಳೆಯರಿಗೆ ಹೊಲಿಗೆ ಯಂತ್ರ ಇತ್ಯಾದಿ ಸೌಲಭ್ಯಗಳನ್ನು ವಿತರಿಸಲಾಯಿತು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್, ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಕಲ್ಲಹಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ಮತ್ತಿತರರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

9 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

21 hours ago