ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಆರಿದ್ರಾ ಮಳೆಯ ಅಬ್ಬರಕ್ಕೆ ಜನಜೀವನ ತತ್ತರಿಸಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕೊಡಗಿನ ಪಶ್ಚಿಮಘಟ್ಟ ವ್ಯಾಪ್ತಿಯ ಬಿರುನಾಣಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ, ಹುದಿಕೇರಿ, ಬಿ.ಶೆಟ್ಟಿಗೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗಿದೆ. ರಸ್ತೆ ನಡುವೆ ನದಿಯಂತೆ ನೀರು ಹರಿದಿದೆ. ಬಿರುನಾಣಿ-ಹುದಿಕೇರಿ ರಸ್ತೆಯ ಹೈಸೊಡ್ಲೂರು-ಪೊರಾಡ್ ಸೇತುವೆ ಬಳಿ ರಸ್ತೆಗೆ ಬರೆ ಕುಸಿತದಿಂದ ಲಘು ವಾಹನ ಹೊರತುಪಡಿಸಿ ದೊಡ್ಡ ವಾಹನ ಸಂಚಾರಕ್ಕೆ ತಡೆಯುಂಟಾಯಿತು. ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿಯೂ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ 10,000 ಕ್ಯೂಸೆಕ್ಸ್‌ನಷ್ಟು ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ. ಮಳೆ ಮತ್ತಷ್ಟು ಹೆಚ್ಚಾಗುವ ಹಾಗೂ ಒಳಹರಿವು ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನದಿಪಾತ್ರದ ನಿವಾಸಿಗಳು ಎಚ್ಚರದಿಂದ ಇರಲು ಸೂಚನೆ ನೀಡಲಾಗಿದೆ.
ಇನ್ನು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿತ್ತು. ಆದರೆ, ಬುಧವಾರ ಬೆಳಿಗ್ಗೆ 8 ಗಂಟೆ ವೇಳೆಗೆ ತಡವಾಗಿ ರಜೆ ಘೋಷಣೆಯಾದ ಬಗ್ಗೆ ಹಲವು ಪೋಷಕರು, ಸಾರ್ವಜನಿಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.





