ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಗಾಳಿ ಸಹಿತ ನಿರಂತರ ಮಳೆಯಾಗಿದೆ.
ಕಳೆದ 2 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕಾವೇರಿ ನದಿಯಲ್ಲಿಯೂ ನೀರಿನ ಮಟ್ಟ ಹೆಚ್ಚಳವಾಗಿದೆ. ನದಿ ತೊರೆಗಳು ತುಂಬಿ ಹರಿಯುತ್ತಿದ್ದು, ಹಾರಂಗಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ 10,000 ದಷ್ಟು ಕ್ಯೂಸೆಕ್ಸ್‌ನಷ್ಟು ನೀರನ್ನು ನದಿಗೆ ಹರಿಯಬಿಡಲಾಗುತ್ತಿದ್ದು, ನದಿ ಪಾತ್ರದ ನಿವಾಸಿಗಳು ಎಚ್ಚರವಹಿಸುವಂತೆ ಸೂಚನೆ ನೀಡಲಾಗಿದೆ.
ಧಾರಾಕಾರ ಮಳೆಯಿಂದಾಗಿ ಬಾಡಗ ಬಾಣಂಗಾಲ ಗ್ರಾಮದ ಅಮೀನ ಕೆ.ಪಿ.(ಕುಂಞಿಮಹಮ್ಮದ್) ರವರ ವಾಸದ ಮನೆಯ ಮುಂಭಾಗದ ಗೋಡೆ ಮತ್ತು ಮೇಲ್ಚಾವಣಿಗೆ ತೀವ್ರ ಹಾನಿಯಾಗಿದೆ. ಪೊನ್ನಂಪೇಟೆ ಹೋಬಳಿ ಹುದೂರು ಗ್ರಾಮದ ನಿವಾಸಿಯಾದ ಹೆಚ್.ಕೆ. ರವಿ ಎಂಬವರ ವಾಸದ ಮನೆಯ ಗೋಡೆ ಕುಸಿದು ತೀವ್ರ ಹಾನಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಗಾಳಿ ಮಳೆಗೆ ಗ್ರಾಮೀಣ ಭಾಗದಲ್ಲಿ ಮರಗಳು ಧರೆಗುರುಳಿವೆ. ಕೆಲೆವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ದುರಸ್ತಿ ಕಾರ್ಯ ಚುರುಕುಗೊಂಡಿದೆ. ಮಂಗಳವಾರ ಜಿಲ್ಲೆಯಲ್ಲಿ ಆರೆಂಜ್ ಅಲಟ್ ಘೋಷಿಸಲಾಗಿದ್ದು, ನಂತರ ಮಳೆ ಕಡಿಮೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಸೋಮವಾರ ಅಂಗನವಾಡಿ, ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.





