ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಆತನ ಪತ್ನಿ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದ ಬಳಿ ಗುರುವಾರ ನಡೆದಿದೆ.
ಮರೂರು ಗ್ರಾಮದ ನಿವಾಸಿ ನಟೇಶ್ (31) ಸಾವನ್ನಪ್ಪಿದ ಸವಾರ. ಪತ್ನಿ ದಿವ್ಯಾ (30 ವರ್ಷ) ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಜೊತೆಯಾಗಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರನ್ನು ಕಂಡು ಆತ ಏಕಾಏಕಿ ಬೈಕ್ ತಿರುಗಿಸಿದ್ದು, ನಿಯಂತ್ರಣ ತಪ್ಪಿ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಗೆ ನಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿ ದಿವ್ಯಾ ಅವರಿಗೆ ಎರಡೂ ಕಾಲುಗಳು ಮುರಿದಿವೆ ಎಂದು ತಿಳಿದುಬಂದಿದೆ.
ಈ ಘಟನೆಯ ಕುರಿತು ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.





