ಕುಶಾಲನಗರ: ನಾಪತ್ತೆಯಾದ ವ್ಯಕ್ತಿ ಕೊಲೆಯಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಮ್ (44), ಕಿರಣ್ ಪತ್ನಿ ಸಂಗೀತ (35) ಹಾಗೂ ಚೌಡ್ಲು ಗ್ರಾಮದ ಪಿ.ಎಮ್ ಗಣಪತಿ (43) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ವೈಯಕ್ತಿಕ ದ್ವೇಷದಿಂದ ಕೊಲೆ ಮಾಡುವ ಉದ್ದೇಶದಿಂದ ಸಂಚು ರೂಪಿಸಿದ ಆರೋಪಿ ಸಂಗೀತ, ಮೇ.9ರಂದು ಸಂಪತ್ ನಾಯರ್‌ನನ್ನು ಸೋಮವಾರಪೇಟೆಯ ಹಾನಗಲ್‌ಗೆ ತಾನು ಪಡೆದ ಸಾಲವನ್ನು ವಾಪಸ್ ನೀಡುತ್ತೇನೆ ಎಂದು ಹೇಳಿ ಬರಮಾಡಿಕೊಂಡಿದ್ದಾಳೆ. ಈ ವೇಳೆ ತನ್ನ ಗಂಡ ಕಿರಣ್ ಹಾಗೂ ಸ್ನೇಹಿತ ಗಣಪತಿ ಜೊತೆ ಸೇರಿ ಕೋವಿಯಿಂದ ಬೆದರಿಸಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾಳೆ.
ಕೊಲೆಯನ್ನು ಮರೆಮಾಚಲು ಮೃತದೇಹವನ್ನು, ಸಂಪತ್ ನಾಯರ್ ತಂದಿದ್ದ ಕಾರಿನಲ್ಲಿ ಹಾಕಿಕೊಂಡು ಸಕಲೇಶಪುರ ತಾಲ್ಲೂಕಿನ ಒಳಗೂರು ಅರಣ್ಯದಲ್ಲಿ ಬಿಸಾಡಿ, ಕಾರನ್ನು ಕಲ್ಲಳ್ಳಿ ಬಳಿ ನಿಲ್ಲಿಸಿ ಮತ್ತೊಂದು ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದರು. ಮೇ.16ರಂದು ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮೂವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.






