ಮಡಿಕೇರಿ: ಪಶ್ಚಿಮ ಘಟ್ಟಗಳಲ್ಲಿ ಭೂ ಉಪಯೋಗದ ಕುರಿತು ಹೊಸ ನಿಯಮಾವಳಿ ರೂಪಿಸುವ ಅಗತ್ಯವಿದ್ದು, ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಇದರಿಂದ ಕೊಡಗಿನಲ್ಲಿಯೂ ಭೂ ಪರಿವರ್ತನೆಗೆ ತಾತ್ಕಾಲಿಕ ಬ್ರೇಕ್ ಬೀಳುವ ಸಾಧ್ಯತೆಯಿದೆ. ನೆರೆಯ ಕೇರಳದ ವಯನಾಡು ದುರಂತ ಸೇರಿದಂತೆ ರಾಜ್ಯದ ನಾನಾ ಕಡೆ ಸಂಭವಿಸಿದ ಭೂಕುಸಿತಗಳ ಬಳಿಕ ಪಶ್ಚಿಮ ಘಟ್ಟಗಳ ಸಂರಕ್ಷಣೆ ನಿಟ್ಟಿನಲ್ಲಿ ಅರಣ್ಯ ಒತ್ತುವರಿ ತೆರವಿಗೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದರು. ಈಗ ಈ ಭಾಗದಲ್ಲಿ ನಿರಂತರವಾಗಿ ನಡೆಯುತ್ತಿರುವ ಭೂ ಪರಿವರ್ತನೆಗೂ ಬ್ರೇಕ್ ಹಾಕುವ ಬಗ್ಗೆ ತೀರ್ಮಾನಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಈಶ್ವರ್ ಖಂಡ್ರೆ ಅವರು, ಪಶ್ಚಿಮ ಘಟ್ಟ ವ್ಯಾಪ್ತಿಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿ ಭೂ ಉಪಯೋಗದ ರೀತಿ ಮತ್ತು ಭೂ ಪರಿವರ್ತನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ರೂಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.