Mysore
15
clear sky

Social Media

ಶುಕ್ರವಾರ, 03 ಜನವರಿ 2025
Light
Dark

ಮಡಿಕೇರಿ: ಗ್ಯಾರಂಟಿ ಯೋಜನೆಗಳ ಪ್ರಗತಿಗೆ ಧರ್ಮಜ ಉತ್ತಪ್ಪ ಸೂಚನೆ

ಮಡಿಕೇರಿ: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು ಎಂದು  ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳು ಅರ್ಹರಿಗೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿ ಆಗಿದೆ. ಹೀಗಾಗಿ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳತ್ತ ಗಮನಹರಿಸಿ ಅರ್ಹರಿಗೆ ತಲುಪಿಸಿ ಎಂದು ಸಲಹೆ ನೀಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸಮಸ್ಯೆ ಕಂಡು ಬಂದಲ್ಲಿ ನಮಗೆ ತಿಳಿಸಿ, ಒಟ್ಟಾರೆ ಯೋಜನೆಗಳಿಂದ ಅರ್ಹರು ವಂಚಿತರಾಗಬಾರದು ಅಷ್ಟೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಕುಶಾಲನಗರ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ ಮಾತನಾಡಿ, ಯುವನಿಧಿ ಯೋಜನೆಯಡಿ ಸಲ್ಲಿಕೆ ಆಗಿರುವ ಬಾಕಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಳಂಬ ಮಾಡದೆ, ಕಾಲಮಿತಿಯಲ್ಲಿ ಅರ್ಹರಿಗೆ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಬೇಕು ಎಂದರು.

ಜಿಲ್ಲೆಯಲ್ಲಿ 1.30 ಲಕ್ಷ ಗುರಿಯಲ್ಲಿ 97,570 ಜನರಿಗೆ ಅನ್ನಭಾಗ್ಯ ಯೋಜನೆಯಡಿ ಹಣ ಪಾವತಿಯಾಗುತ್ತಿದ್ದು, ಶೇ.98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಸಭೆಗೆ ಮಾಹಿತಿ ನೀಡಿದರು.

ಯುವನಿಧಿ ಯೋಜನೆಯು ಪ್ರತೀ ತಿಂಗಳು 3000 ಮತ್ತು 1500 ನಿರುದ್ಯೋಗಿ ಭತ್ಯೆ ನೀಡುವ ಯೋಜನೆಯಾಗಿದ್ದು, ಅರ್ಹರಿಗೆ ತಲುಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 562 ಮಂದಿಗೆ ಯೋಜನೆ ತಲುಪುತ್ತಿದೆ. ಒಟ್ಟಾರೆ ಇದುವರೆಗೆ 1030 ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಉದ್ಯೋಗ ವಿನಿಮಯ ಅಧಿಕಾರಿ ರೇಖಾ ಗಣಪತಿ ಅವರು ಸಭೆಗೆ ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು ಅವರು  ಗೃಹಲಕ್ಷ್ಮಿ ಯೋಜನೆ ಸಂಬಂಧಿಸಿದಂತೆ ಮಾಹಿತಿ ನೀಡಿ ಜೂನ್‍ವರೆಗೆ ಹಣ ಪಾವತಿಯಾಗಿದ್ದು, ಜುಲೈ ತಿಂಗಳ ಹಣ ಪಾವತಿಗೆ ಬಾಕಿ ಇದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1,15,229 ಮಂದಿ ಹೆಸರು ನೋಂದಣಿಯಾಗಿದ್ದು, 1,14,056 ಮಂದಿ ಮಂಜೂರಾಗಿದ್ದು, ಶೇ.98.98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಹೇಳಿದರು.

ಕೊಡಗು ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 1,53,623 ಕುಟುಂಬಗಳಲ್ಲಿ 1,51,907 ಕುಟುಂಬಗಳು ನೋಂದಣಿಯಾಗಿದ್ದು, ಶೇ.98.88 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಮೇ, ಅಂತ್ಯದವರೆಗೆ 5905.30 ಲಕ್ಷ ರೂ. ಸಹಾಯಧನ ಕಲ್ಪಿಸಲಾಗಿದೆ ಎಂದು ಸೆಸ್ಕ್ ಎಇಇ ವಿನಯ್ ಕುಮಾರ್ ಅವರು ತಿಳಿಸಿದರು.

ಶಕ್ತಿ ಯೋಜನೆಯಡಿ ಆರಂಭದಿಂದ ಇದುವರೆಗೆ 62,04,618 ಮಂದಿ ಮಹಿಳೆಯರು ಪ್ರಯಾಣ ಮಾಡಿದ್ದು, 24.65 ಕೋಟಿ ರೂ. ಭರಿಸಲಾಗಿದೆ ಎಂದು ಕೆಎಸ್‍ಆರ್‌ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಾದ ಮೆಹಬೂಬ್ ಅಲಿ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಮೋಹನ್‍ದಾಸ್, ಜಾನ್ಸನ್ ಸೇರಿದಂತೆ ಇತರರು ಇದ್ದರು.

 

Tags: