ಮಡಿಕೇರಿ: ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ, ಶಕ್ತಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಇವುಗಳನ್ನು ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಕಾರದಲ್ಲಿ ನಗರ ದಸರಾ ಸಮಿತಿ ವತಿಯಿಂದ ಗಾಂಧಿ ಮೈದಾನದಲ್ಲಿ ಮಂಗಳವಾರ ನಡೆದ ‘ಮಹಿಳಾ ದಸರಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಹಿಳೆಯರು ರಾಜಕೀಯ, ಆರ್ಥಿಕ, ವಾಣಿಜ್ಯ, ಆಡಳಿತ, ಬಾಹ್ಯಾಕಾಶ, ಕ್ರೀಡೆ, ಸಿನಿಮಾ, ಹೀಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದು ವೀಣಾ ಅಚ್ಚಯ್ಯ ಅವರು ಬಣ್ಣಿಸಿದರು.
ಪಟ್ಟಣ, ನಗರ ಮತ್ತು ಬೃಹತ್ ನಗರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದು, ಗ್ರಾಮೀಣ ಪ್ರದೇಶದ ಮಹಿಳೆಯರಿಗೂ ಅವಕಾಶಗಳು ಒದಗಬೇಕು ಎಂದು ವೀಣಾ ಅಚ್ಚಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಮಹಿಳೆಯರು ಸಾಮಾಜಿಕ ಹಾಗು ಸಾರ್ವಜನಿಕ ಕ್ಷೇತ್ರಗಳಲ್ಲಿ ಮತ್ತಷ್ಟು ತೊಡಗಿಸಿಕೊಂಡಲ್ಲಿ ಶ್ರೇಯೋಭಿವೃದ್ಧಿ ಮತ್ತಷ್ಟು ಹೆಚ್ಚಲಿದೆ. ರಾಷ್ಟ್ರದ ಅಭಿವೃದ್ಧಿಗೆ ಮಹಿಳೆಯರ ಪಾತ್ರ ಹೆಚ್ಚಿನದ್ದಾಗಿದೆ ಎಂದು ನುಡಿದರು.
ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಮಾತನಾಡಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಶೇ.50ರಷ್ಟು ಮೀಸಲು ಶೀಘ್ರ ಜಾರಿಯಾಗಬೇಕು ಎಂದು ಅವರು ಒತ್ತಾಯಿಸಿದರು.
ಮಹಿಳಾ ಮತ್ತು ಪುರುಷ ಸಮಾನವಾಗಿ ಬದುಕಿದಾಗ ಸಮಾಜ ಅಭಿವೃದ್ಧಿ ಸಾಧ್ಯ ಎಂಬುದನ್ನು ಮರೆಯುವಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಗಂಡು-ಹೆಣ್ಣು ಸಮಾನರು ಎಂಬುದನ್ನು ಅರಿತುಕೊಳ್ಳಬೇಕು ಎಂದರು.
ಈ ಹಿಂದೆ ಸ್ತ್ರೀಶಕ್ತಿ ಸಂಘಗಳನ್ನು ಸ್ಥಾಪಿಸುವ ಮೂಲಕ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸಿತು ಎಂಬುದನ್ನು ಮರೆಯಬಾರದು ಎಂದು ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು.
ಮಹಿಳೆಯರು ಸಹಕಾರ ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಆರ್ಥಿಕ, ಕುಟುಂಬ, ಸಾಮಾಜಿಕ, ಜೀವನ ನಿರ್ವಹಣೆ ಅರಿತು ಕೊಳ್ಳಬೇಕು. ಹೀಗಾದಾಗ ರಾಷ್ಟ್ರದ ಅಭಿವೃದ್ಧಿ ಸಾಧ್ಯ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಕೆ.ಪಿ.ಚಂದ್ರಕಲಾ ಅವರು ಪ್ರತಿಪಾದಿಸಿದರು.
ಮಹಿಳಾ ದಸರಾಗೆ ದಿವ್ಯ ಮಂತರ್ ಗೌಡ ಅವರು ಚಾಲನೆ ನೀಡಿದರು. ನಗರಸಭಾ ಸದಸ್ಯರಾದ ಅನಿತಾ ಪೂವಯ್ಯ, ಸವಿತಾ ರಾಕೇಶ್, ಚಿತ್ರಾವತಿ, ಕಲಾವತಿ, ಪ್ರಮುಖರಾದ ಜುಲೈಕಾಭಿ, ಲೀಲಾ ಶೇಷಮ್ಮ, ಸೂರಯ್ಯಾ ಅಬ್ರಾರ್, ಉಷಾ, ಎಚ್.ಎನ್.ಶಾರದ, ಸವಿತಾ, ಸೀತಾಲಕ್ಷ್ಮಿ, ರಜನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತರು ಇತರರು ಇದ್ದರು.