ಕೊಡಗು

ಹೆಚ್ಚಿನ ಮಳೆಯಿಂದ ರಸ್ತೆ ಹಾನಿ ಕೂಡಲೇ ರಸ್ತೆ ಗುಂಡಿ ಮುಚ್ಚಲು ಸಚಿವ ಭೋಸರಾಜು ತಾಕೀತು

ಮಡಿಕೇರಿ: ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ರಸ್ತೆಗಳು ಹಾಳಾಗಿದ್ದು, ತ್ವರಿತಗತಿಯಲ್ಲಿ ಗುಂಡಿ ಮುಚ್ಚುವಂತೆ ಲೋಕೋಪಯೋಗಿ, ಪಂಚಾಯತ್ ರಾಜ್, ನೀರಾವರಿ ಹಾಗೂ ಪೌರಾಡಳಿತ ಇಲಾಖೆಯ ಎಂಜಿನಿಯರ್ ಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸ್ಪಷ್ಟ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು ಕೊಡಗು ಜಿಲ್ಲೆಯಲ್ಲಿ ಸುರಿದ ಹೆಚ್ಚಿನ ಮಳೆಗೆ ರಸ್ತೆಗಳು ಗುಂಡಿಮಯವಾಗಿದ್ದು, ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಕೂಡಲೇ ರಸ್ತೆ ಗುಂಡಿ ಮುಚ್ಚುವಂತೆ ಎಂಜಿನಿಯರ್ ಗಳಿಗೆ ತಾಕೀತು ಮಾಡಿದರು.

ಈ ಬಗ್ಗೆ ವಿಷಯ ಪ್ರಸ್ತಾಪಿಸಿದ ಶಾಸಕರಾದ ಡಾ.ಮಂತರ್ ಗೌಡ ಅವರು ಶನಿವಾರಸಂತೆ-ಕೊಡ್ಲಿಪೇಟೆ, ಕೂಡಿಗೆ-ಸೋಮವಾರಪೇಟೆ ಮಾರ್ಗದ ರಸ್ತೆಗಳು ಸೇರಿದಂತೆ ಹಲವು ರಸ್ತೆಗಳು ಗುಂಡಿ ಬಿದ್ದಿದ್ದು, ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ಕೂಡಲೇ ಗುಂಡಿ ಮುಚ್ಚಬೇಕು ಎಂದು ನಿರ್ದೇಶನ ನೀಡಿದರು.

ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೆಚ್ಚಿನ ಮಳೆಯಿಂದಾಗಿ ರಸ್ತೆಗಳು ಗುಂಡಿಯಾಗಿದ್ದು, ಇದನ್ನು ಸರಿಪಡಿಸುವ ಕೆಲಸ ಆಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯ ಎರಡು ಕ್ಷೇತ್ರದಲ್ಲಿ ಯಾವ ಯಾವ ರಸ್ತೆಗಳು ಹಾಳಾಗಿವೆ ಎಂಬ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿ, ಮಳೆಹಾನಿ ಕಾಮಗಾರಿಯನ್ನು ಕೈಗೊಳ್ಳಬಹುದಾಗಿದೆ. ಆದರೂ ಏಕೆ ಗುಂಡಿ ಮುಚ್ಚಲು ಮುಂದಾಗಿಲ್ಲ ಎಂದು ಪೊನ್ನಣ್ಣ ಅವರು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೆಚ್ಚಿನ ಮಳೆಯಿಂದಾಗಿ ರಸ್ತೆ, ಸೇತುವೆ ಮತ್ತಿತರ ಹಾನಿಯ ಕಾಮಗಾರಿಗಳ ಸಂಬಂಧ ವರದಿ ನೀಡಿ, ಕಾಮಗಾರಿ ಕೈಗೊಳ್ಳ ಬಹುದಾಗಿದೆ. ಆ ನಿಟ್ಟಿನಲ್ಲಿ ಎಂಜಿನಿಯರ್ ಗಳು ತಕ್ಷಣ ಕ್ರಮವಹಿಸಬೇಕು ಎಂದರು.

ಈ ಕುರಿತು ಮಾತನಾಡಿದ ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ ಅವರು ಇಲಾಖೆಯ ವ್ಯಾಪ್ತಿಯಲ್ಲಿ ಸುಮಾರು 75 ಕಾಮಗಾರಿ ಕೈಗೊಳ್ಳಬೇಕಿದ್ದು, ತಾತ್ಕಾಲಿಕ ದುರಸ್ತಿ ಕಾರ್ಯಕ್ಕೆ ಸುಮಾರು 346 ಲಕ್ಷ ರೂ ಅನುದಾನ ಬೇಕಿದೆ, ಸದ್ಯ ರಸ್ತೆಯ ಗುಂಡಿ ಮುಚ್ಚುವ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅತಿವೃಷ್ಟಿಯಿಂದಾಗಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ, ಸೇತುವೆ ಹಾಗೂ ಕಟ್ಟಡಗಳು ಸೇರಿದಂತೆ ಸುಮಾರು 76 ಕೋಟಿ ರೂ.ಗೂ ಹೆಚ್ಚಿನ ನಷ್ಟವಾಗಿದೆ ಎಂದು ಸಿದ್ದೇಗೌಡ ಅವರು ಮಾಹಿತಿ ನೀಡಿದರು.

ಪಂಚಾಯತ್ ರಾಜ್ ವಿಭಾಗದ ಎಇಇ ನಾರಾಯಣ ಮೂರ್ತಿ ಅವರು ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ವ್ಯಾಪ್ತಿಯಲ್ಲಿ ಸುಮಾರು 40 ಕೋಟಿ ರೂ ನಷ್ಟು ಹಾನಿಯಾಗಿದ್ದು, ಗ್ರಾಮೀಣ ರಸ್ತೆಯಲ್ಲಿ ಗುಂಡಿ ಮುಚ್ಚಲಾಗುವುದು ಎಂದರು.

ಹಾಗೆಯೇ ಸೆಸ್ಕ್ ವಿಭಾಗ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಿಂದಾಗಿ ವಿದ್ಯುತ್ ಕಂಬಗಳು, ಪರಿವರ್ತಕಗಳು ಸೇರಿದಂತೆ ಸುಮಾರು 4 ಕೋಟಿ ರೂಗೂ ಹೆಚ್ಚು ಹಾನಿಯಾಗಿದೆ ಎಂದು ಸೆಸ್ಕ್ ಇಇ ಅನಿತಾ ಬಾಯಿ ಅವರು ವಿವರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಭೋಸರಾಜು, ಮಳೆಹಾನಿ ಸಂಬಂಧ ಮುಖ್ಯಮಂತ್ರಿ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿ, ರಸ್ತೆ ಸೇರಿದಂತೆ ಹಲವು ಕಾಮಗಾರಿ ಕೈಗೊಳ್ಳಲು ಸೂಚಿಸಿದ್ದಾರೆ. ನಾನು ಹಲವು ಬಾರಿ ಭೇಟಿ ನೀಡಿದ್ದೇನೆ, ಕಂದಾಯ ಸಚಿವರು ಜಿಲ್ಲೆಗೆ ಆಗಮಿಸಿ ಹಲವು ನಿರ್ದೇಶನ ನೀಡಿದ್ದಾರೆ. ಆದರೂ ಸಹ ರಸ್ತೆ ಗುಂಡಿ ಮುಚ್ಚುವ ಕೆಲಸ ಆಗಿಲ್ಲ ಎಂದರೆ ಹೇಗೆ ಎಂದು ಸಚಿವರು ಪ್ರಶ್ನಿಸಿದರು.

ಮಳೆಹಾನಿ ಕಾಮಗಾರಿಯನ್ನು ಎಂಜಿನಿಯರ್ ಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಸಚಿವರು ತಾಕೀತು ಮಾಡಿದರು.

ಮಳೆಗಾಲದ ಸಂದರ್ಭದಲ್ಲಿ ಸೆಸ್ಕ್ ವಿಭಾಗ ವ್ಯಾಪ್ತಿಯ ಎಲ್ಲಾ ಹಂತದ ಸಿಬ್ಬಂದಿಗಳು ಉತ್ತಮವಾಗಿ ಕೆಲಸ ಮಾಡಿರುವುದಕ್ಕೆ ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು. ವಿವಿಧ ಇಲಾಖೆಯ ಎಂಜಿನಿಯರ್ ಗಳು ಕೆಲಸ ಮಾಡುವ ಬಗ್ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬಂದಲ್ಲಿ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲಿದೆ. ಆ ದಿಸೆಯಲ್ಲಿ ಎಂಜಿನಿಯರ್ ಗಳು ಸೆಸ್ಕ್ ವಿಭಾಗದ ಸಿಬ್ಬಂದಿಗಳ ಮಾದರಿಯಲ್ಲಿ ಕೆಲಸ ನಿರ್ವಹಿಸಬೇಕು ಅವರು ಹೇಳಿದರು.

ಹಾರಂಗಿ ಜಲಾಶಯ ಬಗ್ಗೆ ಮಾಹಿತಿ ಪಡೆದ ಸಚಿವರು ಮಳೆ ಹೆಚ್ಚಾದಲ್ಲಿ ಜಲಾಶಯದಿಂದ ನೀರು ಹೊರ ಬಿಡುವ ಬಗ್ಗೆ ಅಚ್ಚುಕಟ್ಟು ಪ್ರದೇಶದ ಜನರಿಗೆ ಮೊದಲೇ ಮಾಹಿತಿ ನೀಡಬೇಕು ಎಂದು ಸಲಹೆ ಮಾಡಿದರು. ಮನೆ ಹಾನಿಗೆ ಪರಿಹಾರ ವಿತರಣೆ, ಡೆಂಗ್ಯೂ ನಿಯಂತ್ರಣ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಪಡೆದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹಾರಂಗಿ ವಿಭಾಗದ ಅಧೀಕ್ಷಕ ಎಂಜಿನಿಯರ್ ರಘುಪತಿ, ಇಇ ಪುಟ್ಟಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ವಿಶಾಲ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಡಾ.ಶ್ರೀನಿವಾಸ ತಹಶಿಲ್ದಾರರಾದ ಪ್ರವೀಣ್ ಕುಮಾರ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

34 mins ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

46 mins ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

57 mins ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

1 hour ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

2 hours ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

2 hours ago