ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆ, ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರಡಿಯೊಂದು ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲ್ಲೂಕು ಬಾಳಲೆ ಸಮೀಪದ ಜಾಗಲೆ ಎಂಬಲ್ಲಿ ನಡೆದಿದೆ.
ಜಾಗಲೆ ಗ್ರಾಮದ ಆಳಮೇಂಗಡ ಬಿದ್ದಪ್ಪ ಎಂಬವರ ತೋಟದ ಲೈನ್ ಮನೆಯಲ್ಲಿ ವಾಸಿಸುತ್ತಿದ್ದ ಕಾಕು ಎಂಬವರ ಪುತ್ರ ಕುಳ್ಳ (42) ಗಾಯಗೊಂಡವರು. ಮಂಗಳವಾರ ರಾತ್ರಿ 11 ಗಂಟೆ ಸಮಯದಲ್ಲಿ ಕುಳ್ಳ ಮನೆಯ ಹೊರಗಡೆ ಮೂತ್ರ ವಿಸರ್ಜನೆಗೆ ತೆರಳಿದ ಸಂದರ್ಭದಲ್ಲಿ ಕರಡಿ ಏಕಾಏಕಿ ದಾಳಿ ನಡೆಸಿದೆ. ಘಟನೆಯಿಂದ ಅವರ ಮುಖ ಹಾಗೂ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ವಿಚಾರ ತಿಳಿದ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಯೋಗ ಕ್ಷೇಮ ವಿಚಾರಿಸಿದರು. ಅಲ್ಲದೆ, ವೈದ್ಯರೊಂದಿಗೆ ಚರ್ಚಿಸಿ ಉತ್ತಮ ಚಿಕಿತ್ಸೆ ನೀಡುವಂತೆ ಮನವಿ ಮಾಡಿದ್ದಾರೆ. ತಲೆ ಭಾಗಕ್ಕೆ ಸ್ವಲ್ಪ ಪೆಟ್ಟಾಗಿದ್ದು, ಕಣ್ಣಿನ ಭಾಗಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಂಕೇತ್ ಪೂವಯ್ಯ ತಿಳಿಸಿದ್ದಾರೆ.





