ಬೆಂಗಳೂರು : ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡ ಹಿನ್ನೆಲೆಯಲ್ಲಿ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ ೨೪ರವರೆಗೂ ಭಾರೀ ವರ್ಷಧಾರೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಅಲರ್ಟ್ ಘೋಷಣೆ : ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ೩ ದಿನಗಳ ಕಾಲ ಬೆಂಗಳೂರಿನಲ್ಲೂ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಎಲ್ಲೆಲ್ಲಿ ಮಳೆ ವರದಿ: ಕರ್ನಾಟಕದ ಬಹುತೇಕ ಕಡೆ ಮಳೆ ಹೆಚ್ಚಾಗಿದ್ದು, ಕಳೆದ ದಿನ ಮುಲ್ಕಿ, ಕೋಟಾ, ಬಂಟ್ವಾಳ, ಕಾರವಾರ, ಉಡುಪಿ, ಕಾರ್ಕಳ, ಭಾಗಮಂಡಲ, ಕುಂದಾಪುರ, ಮೂಡುಬಿದಿರೆ, ಹುಣಸಗಿ, ಬೆಳ್ತಂಗಡಿ, ಆಗುಂಬೆ, ಗೋಕರ್ಣ, ಹೊನ್ನಾವರದಲ್ಲಿ ಹೆಚ್ಚು ಮಳೆಯಾಗಿದೆ.
ಇನ್ನು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಅಲ್ಲಲ್ಲಿ ಗುಡ್ಡ ಕುಸಿತದಂತಹ ಘಟನೆಗಳು ನಡೆದಿವೆ. ಮಂಗಳೂರು ಮತ್ತು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದು ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.
ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯಪುರ, ಕೊಪ್ಪಳ, ವಿಜಯನಗರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಾಲೆಗೆ ರಜೆ ಘೋಷಣೆ: ರಾಜ್ಯದ ೧೪ ಜಿಲ್ಲೆಗಳಲ್ಲಿ ಜುಲೈ ೨೨ರ ವರೆಗೆ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಬುಧವಾರ ಮುನ್ಸೂಚನೆ ನೀಡಿತ್ತು. ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಹಾಗೂ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಶುಕ್ರವಾರವೂ ರಜೆ ನೀಡಲಾಗಿತ್ತು.



