ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಅಪಘಾತ ಸಂಭವಿಸಿದ ಪರಿಣಾಮ ಚಕ್ರದಡಿಗೆ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ನಾಪೋಕ್ಲು ಕೈಕಾಡು ಮುಖ್ಯರಸ್ತೆಯ ಬೇತು ಗ್ರಾಮದ ರಸ್ತೆ ತಿರುವಿನಲ್ಲಿ ನಡೆದಿದೆ.
ಕೈಕಾಡು ನಿವಾಸಿ ನರೇಂದ್ರ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ನಾಪೋಕ್ಲು ಕಡೆಯಿಂದ ಶುಕ್ರವಾರ ರಾತ್ರಿ 8.30ಕ್ಕೆ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಕೈಕಾಡು ಗ್ರಾಮದಲ್ಲಿರುವ ತನ್ನ ನಿವಾಸಕ್ಕೆ ತೆರಳುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.
ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





