ಗೋಣಿಕೊಪ್ಪ : ಮಾನವ-ವನ್ಯಜೀವಿ ಸಂಘರ್ಷ ತಡೆಯಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕೊಡಗು ಜಿಲ್ಲಾ ಶಾಖೆಯ ವತಿಯಿಂದ ತಿತಿಮತಿ ಮುಖ್ಯರಸ್ತೆಯಲ್ಲಿ ಕೊಡಗು ಜಿಲ್ಲಾ ರೈತ ಸಂಘದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಸರ್ಕಾರದ ಮತ್ತು ಅರಣ್ಯಾಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಹಳಷ್ಟು ಕಡೆ ಆನೆಗಳು ನಾಡಿಗೆ ಬಾರದಂತೆ ತಡೆಗಟ್ಟಲು ಸೋಲಾರ್ ಬೇಲಿ, ರೈಲ್ವೆ ಬ್ಯಾರಿಕೇಡ್, ಕಂದಕಗಳ ನಿರ್ಮಾಣದಂತಹ ಕಾಮಗಾರಿಗಳು ನಡೆಸಿದೆ. ಆದರೆ, ಅದು ಸಫಲತೆಯನ್ನು ಕಂಡುಕೊಳ್ಳುವಲ್ಲಿ ಎಡವಿದ್ದು, ರೈಲ್ವೆ ಬ್ಯಾರಿಕೇಡ್ ಅಳವಡಿಕೆಯ ಸ್ಥಳದಲ್ಲಿಯೇ ಆನೆಗಳು ನುಸುಳಿ ಬರುತ್ತಿದೆ. ಅವೈಜ್ಞಾನಿಕ ಕಾಮಗಾರಿಗಳಿಂದ ಕೋಟಿ ರೂ. ವೆಚ್ಚದಲ್ಲಿ ನಡೆಸಿರುವ ಅಭಿವೃದ್ಧಿ ಕಾಮಗಾರಿಗಳೆಲ್ಲವೂ ವಿಫಲತೆ ಕಂಡಿದೆ. ಇದಕ್ಕೆ ಅರಣ್ಯ ಅಧಿಕಾರಿಗಳೇ ಹೊಣೆಗಾರರಾಗಿದ್ದಾರೆ ಎಂದು ರೈತರು ಆರೋಪಿದರು.
ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಕಾರ್ಮಿಕ ಸಂಘದ ಅಧ್ಯಕ್ಷ ಭರತ್, ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಂ ಶ್ರೇಣ್, ತಾಲ್ಲೂಕು ಡಿ.ಸಿ.ಎಫ್‌ಗಳಾದ ನೆಹರು, ಸೀಮಾ, ಜಗನ್ನಾಥ್, ಅಭಿಷೇಕ್ ರೈತರಿಗೆ ವನ್ಯಪ್ರಾಣಿಗಳಿಂದ ಉಂಟಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕ್ರಮ ತೆಗೆದುಕೊಳ್ಳುತ್ತೇವೆ. ಈ ವಿಚಾರವಾಗಿ ಮೇಲಿನ ಅಧಿಕಾರಿಗಳಿಗೆ ಮತ್ತು ಸರ್ಕಾರದ ಗಮನಕ್ಕೆ ತರುತ್ತೇವೆ ಎಂದು ಭರವಸೆ ನೀಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಸುಜಯ್ ಬೋಪಯ್ಯ, ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ, ಖಜಾಂಚಿ ಸಬಿತಾ ಬೀಮಯ್ಯ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.





