ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಸ್ತೆಗಳು ಬಹಳ ಹದಗೆಟ್ಟಿದ್ದು ರಸ್ತೆಯಲ್ಲಿ ಗುಂಡಿ ಇದೇಯೊ ಇಲ್ಲ ಗುಂಡಿಯಲ್ಲಿ ರಸ್ತೆ ಇದೇಯಾ ಎಂಬ ಪ್ರಶ್ನೆ ಎದ್ದಿದೆ.
ಇದಕ್ಕೆ ಸಾಕ್ಷಿ ಎಂಬಂತೆ ಮಡಿಕೇರಿಯಿಂದ ಅಬ್ಬಿ ಜಲಪಾತಕ್ಕೆ ತೆರಳುವ ರಸ್ತೆಯು ಮುತ್ತಪ್ಪ ದೇವಾಲಯದ ಸಮೀಪ ದೊಡ್ಡ ಹೊಂಡ ಗುಂಡಿಗಳಿಂದ ಕೂಡಿದ್ದು, ಈ ರಸ್ತೆಯಲ್ಲಿ ಸಾಗುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಈ ರಸ್ತೆಯಲ್ಲಿ ವಾಹನ ಸವಾರರು ತೆರಳಲು ಹೆಣಗಾಡುವ ಸ್ಥಿತಿಯನ್ನು ಅಲ್ಲೇ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್ ಕಾನ್ಸ್‌ಟೇಬಲ್ ಸುನೀತ್‌ರವರು ಮನಗಂಡು ರಸ್ತೆಯ ಪಕ್ಕದಲ್ಲೇ ಇದ್ದ ಕಲ್ಲುಗಳನ್ನ ತಂದು ಹೊಂಡ ಗುಂಡಿಗಳಿಂದ ಕೂಡಿದ ರಸ್ತೆಗಳಿಗೆ ಹಾಕಿ ಮುಚ್ಚಿ ವಾಹನ ಸವಾರರಿಗೆ ಅನುಕೂಲವಾಗುವಂತೆ ಮಾಡಿದ್ದಾರೆ.
ಇವರ ಈ ಒಂದು ಸಮಾಜ ಸೇವೆಯನ್ನು ಸ್ಥಳೀಯರು ವಿಡಿಯೋ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸ್ ಕಾನ್ಸ್‌ಟೇಬಲ್ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೆ ಹರಿದು ಬರುತ್ತಿದೆ.
ಮಡಿಕೇರಿ ಸಂಚಾರಿ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿರುವ ಸುನೀತ್‌ರವರು ಈ ಹಿಂದೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು ಸದ್ಯ ಇದೀಗ ಪೊಲೀಸ್ ಇಲಾಖೆಯಲ್ಲಿ ಸೇವೆಯಲ್ಲಿದ್ದಾರೆ.





