ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಮುಂದಿನ 4 ದಿನಗಳು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲ ದಿನಗಳಿಂದ ಮಳೆ ಬಿಡುವು ನೀಡಿತ್ತು. ಇದರಿಂದಾಗಿ ಕೃಷಿ ಚಟುವಟಿಕೆಗಳು ಗರಿಗೆದರಿದ್ದವು. ಇದೀಗ ಮತ್ತೆ ಜಿಲ್ಲೆಯಲ್ಲಿ ಮಳೆ ಆರಂಭವಾಗಿದ್ದು, ಜೂ.16ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಬುಧವಾರ ಮಧ್ಯಾಹ್ನದ ಬಳಿಕ ಮಡಿಕೇರಿ, ವಿರಾಜಪೇಟೆ, ಭಾಗಮಂಡಲ ಸೇರಿದಂತೆ ಹಲೆವೆಡೆ ಉತ್ತಮ ಮಳೆಯಾಗಿದೆ.
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಽಯಲ್ಲಿ ಸರಾಸರಿ 2.42 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.77 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 788.36 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 444.06 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ 11.33 ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ 0.28 ಮಿ.ಮೀ. ಮಳೆಯಾಗಿದೆ. ಮಡಿಕೇರಿ ಕಸಬಾ 4, ಸಂಪಾಜೆ 30.55, ಭಾಗಮಂಡಲ 10.80 ಶಾಂತಳ್ಳಿ 1.10 ಮಿ.ಮೀ.ಮಳೆಯಾಗಿದೆ.





