ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬಿಜೆಪಿಯು ಹೊಂಚು ಹಾಕುತ್ತಿದ್ದು, ಕಾಂಗ್ರೆಸ್ ಶಾಸಕರಿಗೆ 100ಕೋಟಿ ರೂ ಆಫರ್ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪಿ.ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಗಟ್ಟಿಯಾಗಿದೆ ಯಾರಿಂದಲೂ ಅಲುಗಾಡಿಸಲು ಸಾಧ್ಯವಿಲ್ಲ. ಆದರೆ, ಬಿ.ಎಲ್ ಸಂತೋಷ್, ಶೋಭಾ ಕರಂದ್ಲಾಜೆ, ಎಚ್.ಡಿ ಕುಮಾರಸ್ವಾಮಿ ಮತ್ತು ಪ್ರಹ್ಲಾದ್ ಜೋಶಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ನಿರಂತರ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪ ಮಾಡಿದರು.
ರಾಜ್ಯದಲ್ಲಿ ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ಕಾಂಗ್ರೆಸ್ ಐದು ವರ್ಷವೂ ಅಧಿಕಾರದಲ್ಲಿ ಇರುತ್ತದೆ. ನಮ್ಮ ಸಿಎಂ ಸಿದ್ದರಾಮಯ್ಯ ಅವರು ಅಭಿವೃದ್ದಿ ಕಾರ್ಯಗಳನ್ನು ಮಾಡುತ್ತಾರೆ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿವುದಾಗಿ ಮೋದಿಗೆ ಐದು ಜನ ಮಾತು ಕೊಟ್ಟಿದ್ದಾರೆ. ಹೀಗಾಗಿ, ಬಿಜೆಪಿಯ ಬ್ರೋಕರ್‌ಗಳು ಕಾಂಗ್ರೆಸ್ ಶಾಸಕರಿಗೆ ಆಮಿಷ ಹೊಡ್ಡುತ್ತಿದ್ದಾರೆ. ಆದರೆ, ನಮ್ಮ ಶಾಸಕರು ಬಲಿಯಾಗಲ್ಲ. ನಾವು ಸಹ ಎಲ್ಲಾ ಮಾಹಿತಿ ಕಲೆ ಹಾಕುತ್ತೇವೆ. ಮಾಹಿತಿ ಸಂಗ್ರಹಿಸಿ ಇಡಿಗೆ ಕೊಡುತ್ತೇವೆ. ರಾಜ್ಯ ಕಾಂಗ್ರೆಸ್ ಸ್ಟ್ರಾಂಗ್ ಇದೆ. ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿಯ ಯಾರಿಗೂ ತಾಕತ್ತಿಲ್ಲ ಎಂದರು.