Mysore
24
broken clouds
Light
Dark

ಆಗಸ್ಟ್ 1 ರಂದು ವ್ಯಸನ ಮುಕ್ತ ದಿನಾಚರಣೆ

ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯನ್ನು ಆಗಸ್ಟ್ 1ರಂದು ಎಸ್.ಬಿ.ಸಮುದಾಯ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಅವರು ತಿಳಿಸಿದರು.

ಅವರು ಶುಕ್ರವಾರ(ಜು.27) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಮದ್ಯಪಾನ, ಧೂಮಪಾನ ಸೇರಿದಂತೆ ವಿವಿಧ ದುಶ್ಚಟಗಳಿಗೆ ಬಲಿಯಾಗಿ ಮಕ್ಕಳು ತಮ್ಮ ಜೀವನದ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಹಾಗೂ ಗುರಿ ಸಾಧಿಸಲು ವಿಫಲರಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಕೈ ಜೋಡಿಸ ಬೇಕು ಎಂದರು.

ಜಾಗೃತಿ ಜಾಥಾ ಅಗಸ್ಟ್ 1 ರಂದು ಬೆಳಿಗ್ಗೆ 10 ಗಂಟೆಗೆ ಸಂಜಯ್ ಸರ್ಕಲ್ ಬಳಿ ಮಾನವ ಸರಪಳಿ‌ ರಚಿಸಿ ಘೋಷವಾಕ್ಯದೊಂದಿಗೆ ಸಂಜಯ್ ಸರ್ಕಲ್ ನಿಂದ ಎಸ್.ಬಿ. ಸಮುದಾಯ ಭವನದವರೆಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ವೇದಿಕೆ ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ನಂತರ ನುರಿತ ಮನೋ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.

ಪ್ರತಿಜ್ಞೆ ವಿಧಿ ಸ್ವೀಕಾರ
ಅಗಸ್ಟ್1 ರಂದು ಶಾಲಾ ಮತ್ತು ಕಾಲೇಜುಗಳಲ್ಲಿ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳಿಗೆ ವ್ಯಸನ ಮುಕ್ತ ದಿನಾಚರಣೆಯ ಅಂಗವಾಗಿ ಪ್ರತಿಜ್ಙಾ ವಿಧಿ ಬೋಧಿಸುವಂತೆ ತಿಳಿಸಿದರು.

ತಾಲ್ಲೂಕು ಮಟ್ಟದಲ್ಲಿ ಕಾರ್ಯಕ್ರಮ ತಾಲ್ಲೂಕು ಆಡಳಿತ, ಆರೋಗ್ಯ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ವ್ಯಸನ ಮುಕ್ತ ದಿನಾಚರಣೆ ಆಚರಿಸುವಂತೆ ಹೇಳಿದರು.

ಪ್ರಬಂಧ ಸ್ಪರ್ಧೆ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಸೇನನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲು ಪ್ರೌಢಶಾಲಾ ಹಾಗೂ ಪದವಿ ಪೂರ್ವ ಹಂತದಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧ ಆಯೋಜಿಸಿ ವಿಜೇತರಿಗೆ ಕಾರ್ಯಕ್ರಮದ ದಿನ ಬಹುಮಾನ ವಿತರಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ರೋಟರಿ ಸಂಸ್ಥೆ ಅಧ್ಯಕ್ಷೆ ಅನುಪಮ ಸೇರಿದಂತೆ ‌ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.