ಮಂಡ್ಯ : ಜಿಲ್ಲಾಡಳಿತದ ವತಿಯಿಂದ ಈ ಬಾರಿ 4 ದಿನಗಳ ಕಾಲ ಸೆಪ್ಟೆಂಬರ್ 25 ರಿಂದ 28 ರವರಗೆ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮದ ಮೆರವಣಿಗೆ ಗೆ ಸೆಪ್ಟೆಂಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ಚಾಲನೆ ನೀಡಲಾಗುವುದು. ಕಾರ್ಯಕ್ರಮಗಳು ಶ್ರೀ ರಂಗನಾಥ್ ದೇವಸ್ಥಾನದ ಮುಂಭಾಗದ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.
ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಿ ಶ್ರೀರಂಗಪಟ್ಟಣ ದಸರಾ ಮೆರವಣಿಕೆ ಹಾಗೂ ವೇದಿಕೆ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಕಾರ್ಯಕ್ರಮಗಳಲ್ಲಿ ನಮ್ಮ ಇತಿಹಾಸ ಹಾಗೂ ಸಂಸ್ಕೃತಿಗಳ ಹಿನ್ನಲೆ ಹೊಂದಿರಲಿ ಎಂದರು.
ಮಹಿಳೆಯರು, ಮಕ್ಕಳು, ಯುವಕರು, ವೃದ್ಧರು ಸೇರಿದಂತೆ ವಿವಿಧ ವಯೋಮಿತಿಗಳ ಜನರು ಭಾಗವಹಿಸುವ ರೀತಿ ಕಾರ್ಯಕ್ರಮಗಳನ್ನು ಅಧಿಕಾರಿಗಳು ವೈವಿದ್ಯಮಯವಾಗಿ ರೂಪಿಸಿ ದಸರಾ ಕಾರ್ಯಕ್ರಮಗಳನ್ನು ಯಾವುದೇ ಲೋಪವಿಲ್ಲದಂತೆ ಅಚ್ಚುಕಟ್ಟಾಗಿ ಸಂಘಟಿಸಿ ಎಂದರು.
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಮಾತನಾಡಿ ಹಾಲು ಕರೆಯುವ ಸ್ಪರ್ಧೆಯ ಜೊತೆಗೆ ಈ ಬಾರಿ ರಾಸುಗಳ ಪ್ರದರ್ಶನ ಏರ್ಪಡಿಸಿ ಬಹುಮಾನ ವಿತರಣೆ ಮಾಡಬೇಕು ಎಂದರು.
ಮೆರವಣಿಗೆಗೆ ಚಾಲನೆ ನೀಡುವ ಕಿರಂಗೂರು ಬನ್ನಿಮಂಟಪದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಕೈಗೊಂಡು ಸಿದ್ಧತೆಗಳನ್ನು ಪ್ರಾರಂಭಿಸಿ. ಯೋಗ ದಸರಾದಲ್ಲಿ ಯೋಗ ಪ್ರದರ್ಶನದೊಂದಿಗೆ ಯೋಗ ಸ್ಪರ್ಧೆಗಳನ್ನು ಸಹ ಆಯೋಜಿಸಿ. ಶಿಕ್ಷಣ ಇಲಾಖೆ ಅವರು ಯೋಗ ಸ್ಪರ್ಧೆಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಾಲಾ ಕಾಲೇಜುಗಳಿಗೆ ಮಾಹಿತಿ ನೀಡಿ ಎಂದರು.
ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾತನಾಡಿ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮಗಳ ಆಯೋಜನೆಗಾಗಿ ಸ್ವಾಗತ, ಕ್ರೀಡಾ, ವೇದಿಕೆ, ಮೆರವಣಿಗೆ, ಆರೋಗ್ಯ, ನಗರ ಅಲಂಕಾರ, ಹಣಕಾಸು, ಸ್ವಚ್ಛತೆ, ಆಹಾರ, ಆಹಾರ ಮೇಳ, ವಸ್ತು ಪ್ರಸರ್ಶನ, ಸಾಂಸ್ಕೃತಿಕ ಕಾರ್ಯಕ್ರನ ಸೇರಿದಂತೆ ವಿವಿಧ ಉಪಸಮಿತಿಗಳನ್ನು ರಚಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು.
ವಸ್ತು ಪ್ರದರ್ಶನ ಸಮಿತಿಯಿಂದ ಅನಾವರಣ ಗೊಳಿಸಲಾಗುವ ಮಳಿಗೆಗಳಲ್ಲಿ ಅರ್ಧದಷ್ಟು ಮಳಿಗೆಗಳನ್ನು ಆಹಾರ ಮೇಳಕ್ಕೆ ನೀಡಲಾಗುವುದು. ಇಲ್ಲಿ ವಿವಿಧ ಜಿಲ್ಲೆಯಲ್ಲಿ ಹೆಸರುವಾಸಿಯಾಗಿರುವ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದರು.
ಸಭೆಯಲ್ಲಿ ಮಂಡ್ಯ ನಗರಸಭೆ ಅಧ್ಯಕ್ಷ ಎಂ.ವಿ ಪ್ರಕಾಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.





