ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ಎಸ್ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ 83 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದ್ದು, ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ನಿಮಿಷಾಂಬ ದೇವಾಲಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಬಟ್ಟೆ ಬದಲಿಸುವ ಕೊಠಡಿ ನದಿ ಪಕ್ಕದ ಮಂಟಪ ಕೂಡ ಮುಳುಗಡೆಯ ಭೀತಿಯಲ್ಲಿದ್ದು, ನದಿ ಸಮೀಪ ತೆರಳದಂತೆ ಭಕ್ತರಿಗೆ ತಾಲ್ಲೂಕು ಆಡಳಿತ ಸೂಚನೆ ನೀಡಿದೆ.
ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.
ಇನ್ನು ಶ್ರೀರಂಗಪಟ್ಟಣ ತಾಲ್ಲೂಕಿನ ಹಲವು ಪ್ರವಾಸಿ ತಾಣಗಳಿಗೂ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





