ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ತಾಲ್ಲೂಕಿನ ಇಂಡುವಾಳು ಬಳಿ ಪ್ರತಿಭಟನೆ ನಡೆಸಿ, ಬೆಂಗಳೂರು-ಮೈಸೂರು ಹೆದ್ದಾರಿಗೆ ನುಗ್ಗಲು ಮುಂದಾದ ರೈತರನ್ನು ಪೊಲೀಸರು ಬಂಧಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ (ಮೂಲ ಸಂಘಟನೆ )ದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಮಂಜೇಶ್‌ಗೌಡ, ಸೊ.ಶಿ. ಪ್ರಕಾಶ್, ಬನ್ನೂರು ನಾರಾಯಣ, ಸಿದ್ದೇಗೌಡ, ಇ.ಬಸವರಾಜ್, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಮೇಶ್‌ಗೌಡ ಸೇರಿ ನೂರಾರು ರೈತರನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು ಗ್ರಾಮದ ಶಾಲಾ ಆವರಣದಿಂದ ಮೆರವಣಿಗೆ ಹೊರಟು ಸರ್ವಿಸ್ ರಸ್ತೆಯಲ್ಲಿ ಸಾಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಜಿಲ್ಲಾ ಶಾಸಕರು ಮತ್ತು ಸಂಸದರ ವಿರುದ್ಧ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು. ಅರ್ಧ ತಾಸಿಗೂ ಹೆಚ್ಚು ಸಮಯ ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು. ಘೋಷಣೆ ಮೊಳಗಿಸುತ್ತ ರೈತರು ಎಕ್ ಪ್ರೆಸ್ ಹೈವೆಗೆ ನುಗ್ಗಲು ಮುಂದಾದಾಗ ಪೊಲೀಸರು ತಡೆದರು. ಈ ವೇಳೆ ಪ್ರತಿಭಟನಾನಿರತ ರೈತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದು ಪರಸ್ಪರ ತಳ್ಳಾಟ-ನೂಕಾಟ ಉಂಟಾಗಿ ಪೊಲೀಸರು ಪ್ರತಿಭಟನಾನಿರತ ರೈತರನ್ನು ಬಲಪ್ರಯೋಗಿಸಿ ಬಂಧಿಸಿದರು. ಈ ವೇಳೆ ಹಲವು ರೈತರಿಗೆ ಸಣ್ಣಪುಟ್ಟ ಗಾಯಗಳಾದವು.
ಸಂಸದೆ ವಿರುದ್ಧ ಆಕ್ರೋಶ : ಪೊಲೀಸರ ದೌರ್ಜನ್ಯದ ವಿರುದ್ಧ ಬಂಧಿತ ರೈತರು ಆಕ್ರೋಶ ವ್ಯಕ್ತಪಡಿಸಿದರು. ರೈತರ ಪರ ಸಂಸತ್ತಿನಲ್ಲಿ ದನಿ ಎತ್ತಬೇಕಾದ ಸಂಸದೆ ಸುಮಲತಾ ಅಂಬರೀಶ್ ಬೀದಿಗಿಳಿದು ಹೋರಾಟ ಮಾಡುವ ಮೂಲಕ ರೈತರನ್ನು ದಿಕ್ಕುತಪ್ಪಿಸುತ್ತಿದ್ದಾರೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದವರು ಬೀದಿಗಿಳಿದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ನೀರನ್ನೆಲ್ಲ ತಮಿಳುನಾಡಿಗೆ ಹರಿಸಿ ಇದೀಗ ಸರ್ವ ಪಕ್ಷ ಸಭೆ ಕರೆದು ರೈತರ ಪರ ಮೊಸಳೆ ಕಣ್ಣೀರು ಸುರಿಸಲು ಮುಂದಾಗಿದೆ ಎಂದು ಕಿಡಿಕಾರಿದರು.
ಕಾವೇರಿ ಕಣಿವೆ ಜಲಾಶಯಗಳಿಂದ ನೀರು ಬಿಡುವ ಮುನ್ನ ಎಚ್ಚೆತ್ತುಕೊಂಡು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮುಂದಾಗದೆ, ಏಕಾಏಕಿ ನೀರು ಬಿಟ್ಟು ಜಲಾಶಯಗಳನ್ನು ಬರಿದು ಮಾಡಿ, ಕುಡಿಯುವ ನೀರಿಗೂ ತತ್ವಾರ ತಂದು ಇದೀಗ ರೈತರ ಕಣ್ಣಿಗೆ ಮಣ್ಣೆರೆಚುವ ಕೆಲಸಕ್ಕೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ನೇತೃತ್ವದಲ್ಲಿ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿತ್ತು.