ವರದಿ: ಮುದ್ದುರವಿ ಮದ್ದೂರು
ಮದ್ದೂರು: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇಶಹಳ್ಳಿ ಗ್ರಾಮದಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಗ್ರಾಮದ ಬಸ್ ನಿಲ್ದಾಣದ ಬಳಿ ನಿಂತಿದ್ದ ಮಹಿಳೆಯ ಬಳಿ ವಿಳಾಸ ಕೇಳುವ ನೆಪದಲ್ಲಿ ಬಂದ ಆರೋಪಿಗಳು, ಆಕೆಯ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ.
ಈ ವೇಳೆ ಮಹಿಳೆ ಚೀರಾಡುತ್ತಿದ್ದಂತೆ ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣ ಧಾವಿಸಿ ಇಬ್ಬರು ಸರಗಳ್ಳರನ್ನು ಹಿಡಿದಿದ್ದಾರೆ.
ಬಂಧಿತ ಆರೋಪಿಗಳನ್ನು ಬೆಸಗರಹಳ್ಳಿ ಪೊಲೀಸ್ ಠಾಣೆಯ ಪೊಲೀಸರಿಗೆ ಸಾರ್ವಜನಿಕರು ಒಪ್ಪಿಸಿದ್ದಾರೆ. ಸರಗಳ್ಳತನ ಯತ್ನದ ಮಾಹಿತಿ ತಿಳಿದು ಸ್ಥಳಕ್ಕೆ ಎಸ್ಪಿ ಶೋಭಾರಾಣಿ ಭೇಟಿ ನೀಡಿ, ಮಹಿಳೆಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಬಂಧಿತರ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುವ ಕಾರ್ಯವನ್ನು ಪೊಲೀಸರು ಕೈಗೊಂಡಿದ್ದಾರೆ.
ಈ ಪ್ರಕರಣ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.




