ಕಾಮಗಾರಿ ಉದ್ಘಾಟಿಸಿದ ಸಚಿವ ಎನ್ ಚಲುವರಾಯಸ್ವಾಮಿ
ಮಂಡ್ಯ: 30 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬನಘಟ್ಟ – ಕಿರಂಗೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಮಂಗಳವಾರ ಚಾಲನೆ ನೀಡಿದರು.
ಪಾಂಡವಪುರದ ಸಹಕಾರ ಸಕ್ಕರೆ ಕಾರ್ಖಾನೆ ಮುಂಭಾಗ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಬನಘಟ್ಟ – ಕಿರಂಗೂರು ರಸ್ತೆಯನ್ನು 30 ಕೋಟಿ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಸರ್ಕಾರ ತಿರ್ಮಾನಿಸಿದೆ. ಬಹಳ ವರ್ಷಗಳಿಂದ ಹದಗೆಟ್ಟಿದ್ದ ಬನಘಟ್ಟ – ಕಿರಂಗೂರು ರಸ್ತೆಯಲ್ಲಿ ಜನ ಸಾಮನ್ಯರು ಇದುವರೆಗೂ ಅನುಭವಿಸುತ್ತಿದ್ದ ಟ್ರಾಫಿಕ್ ಸಮಸ್ಯೆ ಹಾಗೂ ಅಪಘಾತಗಳನ್ನು ತಪ್ಪಿಸುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಆದಷ್ಟು ಬೇಗ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ರಾಷ್ಟ್ರೀಯ ಹೆದ್ದಾರಿಯ ವಾಹನ ಸಂಚಾರ ಹೆಚ್ಚಿರುತ್ತದೆ ಹಾಗಾಗಿ ಉತ್ತಮ ರಸ್ತೆ ನಿರ್ಮಾಣ ಮಾಡಿ ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ ಬನಘಟ್ಟದಿಂದ ಕಿರಂಗೂರು ರಸ್ತೆಯಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ತಪ್ಪಿಸುವ ಸಲುವಾಗಿ ಸರ್ಕಾರವು ಗುಣಮಟ್ಟದ ರಸ್ತೆ ಕಾಮಗಾರಿಗೆ 30 ಕೋಟಿ ರೂ ಅನುಮೋದನೆ ನೀಡಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಬಹಳ ಮುಖ್ಯವಾಗಿದೆ ಎಂದರು.