ಮಂಡ್ಯ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಡಿಯುವ ನೀರನ್ನು ಟ್ಯಾಂಕರ್ ಹಾಗೂ ಖಾಸಗಿ ಬೋರ್ ವೆಲ್ ಮೂಲಕ ನೀರು ಒದಗಿಸುತ್ತಿರುವ ಗ್ರಾಮಗಳಿಗೆ ತಾಲ್ಲೂಕು ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು.
ಜಿಲ್ಲೆಯಲ್ಲಿ ಕುಡಿಯುವ ನೀರು ಒದಗಿಸಲು ಕಳೆದ ಎರಡು ತಿಂಗಳಿನಿಂದ ಜೆ.ಜೆ.ಎಂ ಹಾಗೂ ಕಂಟೆಜೆನ್ಸಿ ಯೋಜನೆಯಡಿ 164 ಹೊಸ ಬೋರ್ ವೆಲ್ ಗಳನ್ನು ಕೊರೆಯಲಾಗಿದೆ. ಕುಡಿಯುವ ನೀರಿನ ಅವಶ್ಯಕತೆಗೆ ಜಿಲ್ಲಾಡಳಿತ ನಿರಂತರವಾಗಿ ಸ್ಪಂದಿಸುತ್ತಿದ್ದು, ಸಾರ್ವಜನಿಕರು ಸಹ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಕೆ. ಆರ್. ಪೇಟೆ ತಾಲ್ಲೂಕಿನ ಮುರುಗನಕೊಪ್ಪಲು ಹಾಗೂ ಹೊಸೂರು, ಮದ್ದೂರು ತಾಲ್ಲೂಕಿನ ಚಿಕ್ಕೋನಹಳ್ಳಿ, ಬಸರಾಳು ಮಂಡ್ಯ ತಾಲ್ಲೂಕಿನ ಪಂಚೆಗೌಡನಹಳ್ಳಿ, ತಿಮ್ಮನಹೊಸೂರು ಸೇರಿದಂತೆ ಒಟ್ಟು 6 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರನ್ನು ಪೂರೈಸಲಾಗುತ್ತಿದೆ ಎಂದು ಆಯಾ ತಾಲ್ಲೂಕಿನ ತಹಶೀಲ್ದಾರ್ ಸಭೆಗೆ ಮಾಹಿತಿ ಒದಗಿಸಿದರು.
ಉಪವಿಭಾಗಾಧಿಕಾರಿಗಳು ಟಾಸ್ಕ್ ಫೋಸ್೯ಸಮಿತಿ ಅಧ್ಯಕ್ಷರಾಗಿದ್ದು, ಪ್ರತಿವಾರ ಸಭೆ ನಡೆಸಿ ಕುಡಿಯುವ ನೀರಿನ ತೊಂದರೆ ಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗುವ ಗ್ರಾಮಗಳನ್ನು ಪಟ್ಟಿ ಮಾಡಿಕೊಂಡು ಯೋಜನೆಗಳನ್ನು ರೂಪಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಅನಧಿಕೃತವಾಗಿ ಪಂಪ್ ಸೆಟ್ ಮೋಟರ್ ಬಳಸಿ ಕೆರೆಗಳಿಂದ ನೀರು ಪಡೆದು ಕೃಷಿ ಅಥವಾ ಅನ್ಯ ಉದ್ದೇಶಕ್ಕೆ ಬಳಸುತ್ತಿದ್ದರೆ ಮುಲಾಜಿಲ್ಲದೆ ಮೋಟರ್ ಗಳನ್ನು ಜಪ್ತಿ ಮಾಡಿಕೊಂಡು ಕ್ರಮಕೈಗೊಳ್ಳಿ. ಕುಡಿಯುವ ನೀರು ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಒದಗಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಅಭಿಯಂತರ ಶಿವರಾಜು, , ನಗರಾಭಿವೃದ್ಧಿ ಕೋಶದ ಯೋಜನ ನಿರ್ದೇಶಕಿ ತುಷಾರಮಣಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್ ಹೆಚ್ ನಿರ್ಮಲ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.