ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಹನಕೆರೆ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಬಿ.ಗೌಡಗೆರೆ ಗ್ರಾಮದ ಜಿ.ಕೆ.ಕೆಂಪೇಗೌಡ ಎಂಬವರ ಪತ್ನಿ ಯಶೋದಮ್ಮ (೫೫) ಮೃತ ಮಹಿಳೆ. ಯಶೋದಮ್ಮ ಹೆದ್ದಾರಿ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮಹಿಳೆಯರ ದೇಹ ಸಂಪೂರ್ಣ ಛಿದ್ರಗೊಂಡಿದೆ. ಘಟನೆಗೆ ಕಾರಣವಾದ ವಾಹನವನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ. ಇದು ಸುತ್ತಮುತ್ತಲ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆ ಹಿನ್ನಲೆಯಲ್ಲಿ ಸ್ಥಳೀಯರು ಹೆದ್ದಾರಿಯ ಎರಡೂ ಮಾರ್ಗಗಳಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು. ಅಗತ್ಯ ಸ್ಥಳದಲ್ಲಿ ಅಂಡರ್‌ಪಾಸ್ ನಿರ್ಮಿಸಿಲ್ಲ. ಇದರಿಂದ ಸ್ಥಳೀಯರು ಹೆದ್ದಾರಿ ದಾಟಲು ತೊಂದರೆಯಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ನಿರ್ಲಕ್ಷದಿಂದ ಇಂತಹ ಘಟನೆಗಳು ಸಂಭವಿಸುತ್ತಿವೆ ಎಂದು ಕಿಡಿಕಾರಿದರು.
ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತಮ್ಮ ಸಿಟ್ಟು ಹೊರಹಾಕಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು. ಡಿಸಿ, ಎಸ್ಪಿ ಆಗಮಿಸಿದ ಹೊರತು ಶವವನ್ನು ತೆಗೆಯಲು ಬಿಡದೆ ಕಿಡಿಕಾರಿದರು. ಇದರಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಥಳಕ್ಕೆ ತೆರಳಿ ಪ್ರತಿಭಟನಾಕಾರರೊಂದಿಗೆ ಸಮಾಲೋಚನೆ ನಡೆಸಿ ಮನವೊಲಿಸಿದರು. ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





