ಮಂಡ್ಯ: ಇದೇ ಮೊದಲ ಬಾರಿಗೆ ಜೂನ್ ತಿಂಗಳಿನಲ್ಲೇ ಭರ್ತಿಯಾಗಿರುವ ಕೆಆರ್‌ಎಸ್ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಅವರಿಂದು ಬಾಗಿನ ಸಮರ್ಪಿಸಿದರು.
ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಜೂನ್ ತಿಂಗಳಿನಲ್ಲೇ ಸಂಪೂರ್ಣ ಭರ್ತಿಯಾಗಿದೆ.
ಈ ಹಿನ್ನೆಲೆಯಲ್ಲಿಂದು ಸಿಎಂ ಸಿದ್ದರಾಮಯ್ಯ ಅವರು ಶುಭ ಅಭಿಜಿನ್ ಮುಹೂರ್ತದಲ್ಲಿ ಬಾಗಿನ ಅರ್ಪಿಸಿದ್ದಾರೆ. ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿವೆ.
ಬಾಗಿನ ಅರ್ಪಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಸಚಿವ ಎಚ್.ಸಿ.ಮಹದೇವಪ್ಪ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
ಕೆಆರ್‌ಎಸ್ ಜಲಾಶಯ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಜೂನ್ ತಿಂಗಳಿನಲ್ಲೇ ಸಂಪೂರ್ಣವಾಗಿ ಭರ್ತಿಯಾಗದೆ. ಜೂನ್ ತಿಂಗಳಿನಲ್ಲೇ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಕರ್ನಾಟಕದ ಮೊದಲ ಸಿಎಂ ಸಿದ್ದರಾಮಯ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ನೂತನ ದಾಖಲೆ ಬರೆದಿದ್ದಾರೆ.



